ಬೆಳಗಾವಿ: ಸದನದಲ್ಲಿ ನಾಡಿನ ಜನರ ಒಳಿತಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ, ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಲು ಸದನವನ್ನು ಬಳಸಿಕೊಳ್ಳಲಾಗುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸನ ಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಸುಧಾರಣೆಗಳನ್ನು ಜಾರಿಗೆ ತಂದಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ದೇಶದ ಬಡವರು ಹಾಗೂ ಕಾರ್ಮಿಕರಿಗೆ ಅನುಕೂಲವಾಗುವಂತೆ ರೂಪಿಸಲಾಗಿದೆ. ಈ ವಿಷಯದ ಕುರಿತು ಚರ್ಚೆ ಮಾಡುವ ನೆಪದಲ್ಲಿ ವಿಶೇಷ ಅಧಿವೇಶನ ಕರೆದು, ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ದ್ವೇಷ ಸಾಧಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ವಿಜಯೇಂದ್ರ ದೂರಿದರು.
ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಬಗ್ಗೆ ಪದೇ ಪದೇ ಮಾತನಾಡುವ ಸಿದ್ದರಾಮಯ್ಯ ಅವರೇ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಕುತಂತ್ರ ನಡೆಸುತ್ತಿದ್ದಾರೆ ಎಂಬುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ನಾಡಿನ ಹಿತವನ್ನು ಮರೆತು, ನಿರಂತರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಿಷಕಾರುವ ಮೂಲಕ ಜನರನ್ನು ಎತ್ತಿಕಟ್ಟುವುದಲ್ಲೇ ಕಳೆದ ಎರಡು ವರ್ಷಗಳಿಂದ ಕಾಲ ಕಳೆಯುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಣಾಕ್ಷ ರಾಜಕೀಯ ನಡೆ ಅನುಸರಿಸುತ್ತಿದ್ದಾರೆ. ಒಂದು ಕಡೆ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದ್ದು, ಮತ್ತೊಂದು ಕಡೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುವ ಉದ್ದೇಶದಿಂದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಕೈಕೊಡುವ ತಂತ್ರವಾಗಿ ಈ ವಿಶೇಷ ಅಧಿವೇಶನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.



