ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜನಸ್ಪಂದನ ಹೆಸರಿನಲ್ಲಿ ಜನತಾದರ್ಶನ ನಡೆಸುತ್ತಿದ್ದು, ಮೊದಲಿಗೆ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಅಹವಾಲನ್ನು ಸ್ವೀಕರಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಪುಟ್ಟಸ್ವಾಮಿ ಅವರು ಹೃದ್ರೋಗ ಚಿಕಿತ್ಸೆಗಾಗಿ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಟ್ಟಸ್ವಾಮಿ ಅವರಿಗೆ ನೆರವು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಸೂಚಿಸಿದರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನವನ್ನು ಆಯೋಜಿಸಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ರೈತರು, ಮಹಿಳೆಯರು ಜನತಾ ದರ್ಶನಕ್ಕೆ ಆಗಮಿಸಿದ್ದು,
ಸಿಎಂ ಜನತಾದರ್ಶನಕ್ಕೆ ಬಿಗಿ ಪೊಲೀಸ್ ಕಾವಲು ನೇಮಿಸಲಾಗಿದೆ. ಅಹವಾಲು ಸ್ವೀಕಾರ ಮತ್ತು ಪರಿಶೀಲನೆಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ಇತರೇ ಸಹಾಯಕ ಸಿಬ್ಬಂದಿ ಸೇರಿ ಒಟ್ಟು 1,000 ಅಧಿಕಾರಿ ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಹಾಜರಿದ್ದಾರೆ. ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಇದಾಗಿದೆ.