ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಬಿಜೆಪಿ ಗದಗ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಕ್ರಮಗಳಿಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಹಾಗೂ ಮಾಜಿ ಸಚಿವ ಸಿ.ಸಿ. ಪಾಟೀಲ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಂದು ದಿನವೂ ರಜೆ ಹಾಕದೆ ದೇಶಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು. ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ನರೇಂದ್ರ ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಚರಿಸುವುದು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ಮೋದಿಯವರ ಸಾರ್ವಜನಿಕ ಸೇವೆಯ 25 ವರ್ಷಗಳ ಸ್ಮರಣಾರ್ಥ ಜಿಲ್ಲೆಯಲ್ಲಿ ಹಲವು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
‘ಆಶೀರ್ವಾದ ದೀಪ’, ‘25 ಕೋಟಿ ಮಕ್ಕಳ ಕನಸಿನ ಭಾರತ’, ‘ನಮೋ ಸೇವಾ ಕಥನ’ ಬೀದಿ ನಾಟಕ, ಅಂಗಳದ ಉತ್ಸವ, ಬದಲಾವಣೆಯ ಕಥೆ, ವಿಕಸಿತ ಭಾರತ ಸಂಕಲ್ಪ ಯಾತ್ರೆ, ಸೇವಾ ಜ್ಯೋತಿ ಯಾತ್ರೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ‘ಸೇವೆ ನನ್ನ ಯೋಗದಾನ’ದಡಿ ರಕ್ತದಾನ ಶಿಬಿರ, ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ಭೇಟಿ, ವೃಕ್ಷಾರೋಪಣ, ಆರೋಗ್ಯ ತಪಾಸಣಾ ಶಿಬಿರ ಮತ್ತು ಸ್ವಚ್ಛತಾ ಅಭಿಯಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಾ. ಚಂದ್ರ ಲಮಾಣಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಕೇಂದ್ರ ಆಹಾರ ನಿಗಮದ ಸದಸ್ಯ ರವಿ ದಂಡಿನ, ನರಗುಂದ ಯುವ ಮುಖಂಡ ಉಮೇಶಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರೇಶ ರಟ್ಟಿಹಳ್ಳಿ, ಸೇವಾ ಸಂಕಲ್ಪ ಅಭಿಯಾನ ತಂಡದ ಜಿಲ್ಲಾ ಸದಸ್ಯರಾದ ಅನೀಲ ಅಬ್ಬಿಗೇರಿ, ಸಂತೋಷ ಅಕ್ಕಿ ಸೇರಿದಂತೆ ಬಿಜೆಪಿ 9 ಮಂಡಲಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಮತ್ತು ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಹಾಗೂ ಮಂಡಲ ತಂಡದ ಸದಸ್ಯರು ಭಾಗವಹಿಸಿದ್ದರು.
ಮೋದಿಯವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಹಮ್ಮಿಕೊಳ್ಳಲಾಗಿರುವ ವಿವಿಧ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಜವಾಬ್ದಾರಿ. ಕಾರ್ಯಕರ್ತರು ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು.
— ತೋಟಪ್ಪ (ರಾಜು) ಕುರುಡಗಿ, ಬಿಜೆಪಿ ಗದಗ ಜಿಲ್ಲಾಧ್ಯಕ್ಷ



