ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನವರಿ 12ರಂದು ಜರುಗಿದ ಕಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಪಹರಣ ಪ್ರಕರಣದ ಆರೋಪಿ ವಿರುದ್ಧ ಎಫ್ಐಆರ್ ದಾಖಲಿಸಿ, ಕ್ರಮ ಜರುಗಿಸಲಾಗಿದೆ. ಶಾಲಾ ಅವಧಿಯಲ್ಲಿ ಮಕ್ಕಳ ಅಪಹರಣ ಆಗಿರುವದರಿಂದ ಈ ಕುರಿತು ತನಿಖೆ ಮಾಡಿ ವರದಿ ನೀಡಲು, ಜಿಲ್ಲಾ ಪಂಚಾಯಿತಿ ಸಿಇಓ ಅವರು ಅಧಿಕಾರಿಗಳ ಸಮಿತಿ ರಚಿಸಿದ್ದಾರೆ. ಸಮಿತಿ ನೀಡುವ ವರದಿ ಪರಿಶೀಲಿಸಿ, ಲೋಪ ಉಂಟಾಗಿದ್ದಲ್ಲಿ ಸಂಬಂಧಿಸಿದವರ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಅಪಹರಣದಿಂದ ಸುರಕ್ಷಿತವಾಗಿ ಪಾರಾಗಿ, ಜಿಲ್ಲಾ ಆಸ್ಪತ್ರೆಯ ಸಖಿ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಶಾಲಾ ಆವರಣದಲ್ಲಿ ಸುರಕ್ಷತೆ ಹೆಚ್ಚಿಸುವುದು, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸೂಕ್ತ ನಿಯಮಗಳನ್ನು ಜಾರಿ ಮಾಡುವುದು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರದ ನಿಯಮಾವಳಿಗಳನ್ನು ಪರಿಶೀಲಿಸಿ, ಸೂಕ್ತ ಕ್ರಿಯಾಯೋಜನೆಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲು ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ನಿರ್ದೇಶಿಸಿರುವದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಮಕ್ಕಳ ಭೇಟಿ ಸಮಯದಲ್ಲಿ, ಮಕ್ಕಳಿಂದಲೇ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು. ಮಕ್ಕಳ ಪಾಲಕರ ಅಭಿಪ್ರಾಯ ಸಂಗ್ರಹಿಸಿದರು. ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಸಂಗ್ರಹಿಸಿ, ಮುಂಜಾಗ್ರತೆ ವಹಿಸುವಂತೆ ಎಚ್ಚರಿಕೆ ನೀಡಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಪ್ರಕರಣದ ತನಿಖೆಗೆ ಕ್ರಮ ಕೈಗೊಳ್ಳಲಾಗಿದೆ. ವರದಿ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಶಾಲಾ ಅವಧಿಯಲ್ಲಿ ಕಡ್ಡಾಯವಾಗಿ, ಶಿಕ್ಷಕರು ಶಾಲೆಯಲ್ಲಿ ಇದ್ದು, ಮಕ್ಕಳಿಗೆ ಪಾಠ ಬೋಧನೆ ಮಾಡಬೇಕು ಮತ್ತು ಮಕ್ಕಳ ಸುರಕ್ಷತೆ ಬಗ್ಗೆ ನಿಗಾವಹಿಸಬೇಕು. ಈ ಕುರಿತು ಪರಿಶೀಲಿಸಿ, ಕ್ರಮ ವಹಿಸಲು ಈಗಾಗಲೇ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಮ್. ಹೊನಕೇರಿ, ಪೊಲೀಸ್ ಇನಸ್ಪೆಕ್ಟರ್ ಪ್ರಭು ಗಂಗೆನಹಳ್ಳಿ ಸೇರಿದಂತೆ ಇತರರು ಇದ್ದರು.
ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಪ್ರಕರಣದ ಆರೋಪಿಗೆ ಕಾನೂನು ಪ್ರಕಾರ ಕ್ರಮ ಆಗಬೇಕು. ಪ್ರಕರಣದ ಕುರಿತು ಸಮಗ್ರ ತನಿಖೆ ಮಾಡಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಜಿಲ್ಲಾಡಳಿತವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಸದರಿ ಪ್ರಕರಣದಲ್ಲಿ ವಿಶೇಷ ಅಭಿಯೋಜಕರ ಅವಶ್ಯಕತೆ ಇದ್ದಲ್ಲಿ ಪೊಲೀಸ್ ಇಲಾಖೆ ಪರಿಶೀಲಿಸಿ, ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಪ್ರಕರಣದ ಆರೋಪಿಯು ಈ ಹಿಂದೆಯೂ ಇಂತಹ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸ್ ಮಾಹಿತಿ ಇದ್ದು, ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ಮಾಡಿ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.



