ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರು ಇಂದು ಬೆಂಗಳೂರಿನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ, ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಗೆ ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಘಟನಾ ಸ್ಥಳ ವೀಕ್ಷಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಸಿ.ಜೆ. ರಾಯ್ ಅವರು ಸ್ವತಃ ಗುಂಡು ಹಾರಿಸಿಕೊಂಡಿರುವುದು ಪ್ರಾಥಮಿಕವಾಗಿ ಕಂಡುಬರುತ್ತಿದೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ಇಂದು ಮಧ್ಯಾಹ್ನ ಸುಮಾರು 3.15ರ ವೇಳೆಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದರು. ಕಳೆದ ಮೂರು ದಿನಗಳಿಂದ ಕಾನ್ಫಿಡೆಂಟ್ ಗ್ರೂಪ್ ಹಾಗೂ ಸಿ.ಜೆ. ರಾಯ್ ಸಂಬಂಧಿತವಾಗಿ ಆದಾಯ ತೆರಿಗೆ ಇಲಾಖೆಯ ದಾಳಿ ನಡೆಯುತ್ತಿತ್ತು. ಕೇರಳದಿಂದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಂದಿದ್ದರು. ಸದ್ಯ ಘಟನಾ ಸ್ಥಳದಲ್ಲಿ ಯಾವುದೇ ಐಟಿ ಅಧಿಕಾರಿಗಳು ಇಲ್ಲ ಎಂದು ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದರು.
“ನಮ್ಮ ಪೊಲೀಸರು ಆದಾಯ ತೆರಿಗೆ ಇಲಾಖೆಯಿಂದಲೂ ಅಗತ್ಯ ಮಾಹಿತಿಯನ್ನು ಪಡೆಯಲಿದ್ದಾರೆ. ಸಿ.ಜೆ. ರಾಯ್ ಅವರ ಕುಟುಂಬದವರು ವಿದೇಶದಲ್ಲಿದ್ದು, ಅವರು ಈಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗುವುದು” ಎಂದು ಸೀಮಂತ್ ಕುಮಾರ್ ಸಿಂಗ್ ಹೇಳಿದರು.
ಮೇಲ್ನೋಟಕ್ಕೆ ಇದು ಸೆಲ್ಫ್ ಶೂಟ್ ಪ್ರಕರಣವಾಗಿರುವಂತೆ ಕಾಣಿಸುತ್ತಿದೆ. ಆದರೆ ಈ ಪ್ರಕರಣದಲ್ಲಿ ಅಸಹಜ ಸಾವು (UDR) ಪ್ರಕರಣ ದಾಖಲಿಸಬೇಕೋ ಅಥವಾ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಬೇಕೋ ಎಂಬ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.
ಈ ಸಂಬಂಧ ಕಾನ್ಫಿಡೆಂಟ್ ಗ್ರೂಪ್ನ ಒಬ್ಬ ನಿರ್ದೇಶಕರು ದೂರು ನೀಡಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಘಟನೆಯ ಎಲ್ಲಾ ಆಯಾಮಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.



