ಬೆಂಗಳೂರು/ಮೈಸೂರು: ಮುಡಾ ಪ್ರಕರಣದ ಪ್ರಮುಖ ವ್ಯಕ್ತಿಯಾಗಿರುವ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಮುಡಾದ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಮೇರೆಗೆ ಬಂಧನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗೆ ಸ್ನೇಹಮಯಿ ಕೃಷ್ಣ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದೂವರೆ ಕೋಟಿ ರೂಪಾಯಿ ಹಣ ನೀಡಿ ಡಿ.ಬಿ. ನಟೇಶ್ ಮುಂಬಡ್ತಿ ಪಡೆದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು.
ಈ ಆರೋಪಗಳ ಹಿನ್ನೆಲೆಯಲ್ಲಿ ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ಅವರು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ಅವರಿಗೆ ದೂರು ಸಲ್ಲಿಸಿದ್ದರು.
ದೂರಿನ ಅನ್ವಯ ಪರಿಶೀಲನೆ ನಡೆಸುವಂತೆ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಪ್ರಕರಣ ದಾಖಲಿಸಿಕೊಂಡಿದ್ದ ಬೆಂಗಳೂರು ಸೈಬರ್ ಪೊಲೀಸರು ಇಂದು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.



