ಟೀಮ್ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ವಿರುದ್ಧ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ದೂರು ದಾಖಲಾಗಿದೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತದ ಗೆಲುವಿನ ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ರಾಷ್ಟ್ರಧ್ವಜವನ್ನು ಬಳಸಿದ ರೀತಿಯೇ ವಿವಾದಕ್ಕೆ ಕಾರಣವಾಗಿದೆ.
ಮಾರ್ಚ್ 8ರಂದು ಟಿ20 ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ನ್ಯೂಝಿಲೆಂಡ್ ವಿರುದ್ಧ ಗೆಲುವು ದಾಖಲಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಸಂಭ್ರಮಾಚರಣೆಯ ವೇಳೆ ಪಾಂಡ್ಯ ರಾಷ್ಟ್ರಧ್ವಜವನ್ನು ಮೈಮೇಲೆ ಸುತ್ತಿಕೊಂಡು ಮೈದಾನದಲ್ಲಿ ಮಲಗಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಈ ಹಿನ್ನೆಲೆಯಲ್ಲಿ ಪುಣೆಯ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ವಕೀಲ ವಾಜಿದ್ ಖಾನ್ ತಿಳಿಸಿದ್ದಾರೆ. ಸಂಭ್ರಮಾಚರಣೆಯ ವೇಳೆ ಪಾಂಡ್ಯ ತಮ್ಮ ಗೆಳತಿ ಮಹಿಕಾ ಶರ್ಮಾ ಜೊತೆ ಪೋಡಿಯಂ ಮೇಲೆ ಮಲಗಿದ್ದಾಗಲೂ ರಾಷ್ಟ್ರಧ್ವಜವನ್ನು ಮೈಮೇಲೆ ಧರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ (1971) ಪ್ರಕಾರ ರಾಷ್ಟ್ರಧ್ವಜವನ್ನು ವಸ್ತ್ರದಂತೆ ಬಳಸಬಾರದು ಹಾಗೂ ಅದು ನೆಲಕ್ಕೆ ತಾಗಬಾರದು ಎಂಬ ನಿಯಮವಿದೆ. ಪಾಂಡ್ಯ ಈ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸದ್ಯ ಪುಣೆ ಪೊಲೀಸರು ದೂರನ್ನು ಸ್ವೀಕರಿಸಿದ್ದು, ಪ್ರಕರಣದ ಕುರಿತು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸುವ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ. ಆರೋಪ ಸಾಬೀತಾದಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯಡಿ ಗರಿಷ್ಠ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ದಂಡ ವಿಧಿಸುವ ಅವಕಾಶವಿದೆ.



