ಅನುಮೋದಿತ ಕಾಮಗಾರಿಯನ್ನು ನಿಗದಿತ ಸಮಯದಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳಿಸಿ: ರಮಣದೀಪ್ ಚೌಧರಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಅನುಮೋದನೆಕೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದೊಂದಿಗೆ  ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಹೇಳಿದರು.

Advertisement

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವು ಇಲಾಖೆಯ ಕಾಮಗಾರಿಗಳ ಕ್ರಿಯಾ ಯೋಜನೆಗಳು ಬದಲಾವಣೆಗೊಂಡಿದ್ದು, ಬದಲಾವಣೆಗೊಂಡ ಕಾಮಗಾರಿಗಳನ್ನು ಒಳಗೊಂಡಂತೆ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಕೃಷಿ ಬೆಳೆಗಳ ವಿಮೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಮಾತನಾಡಿ, ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಕಡಲೆ, ಜೋಳ, ಗೋದಿ ಬೆಳೆಗಳ ಬೆತ್ತನೆಯಾಗಿದೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಅಭಾವವಿಲ್ಲ. ರೈತರಿಗೆ ಈಗಾಗಲೇ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಲಾಗಿದೆ  ಎಂದು ಸಭೆಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 42 ವಸತಿ ನಿಲಯಗಳಿದ್ದು, ಅದರಲ್ಲಿ 35 ವಸತಿ ನಿಲಯಗಳಿಗೆ ಸ್ವಂತ ಕಟ್ಟಡವಿದೆ. ಉಳಿದ ವಸತಿ ನಿಲಯಗಳಿಗೆ ಜಾಗ ಲಭ್ಯವಿದ್ದು, ಈಗಾಗಲೇ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ   ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಆರ್.ಎಸ್. ಬುರಡಿ ಮಾತನಾಡಿ, ಎಲ್ಲಾ ಶಾಲೆಗಳಲ್ಲಿ ಉತ್ತಮ ಭೋದನೆ ನಡೆಯುತ್ತಿದ್ದು, ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ವಿವೇಕ ಯೋಜನೆಯಡಿ 95ಶಾಲೆಗಳಲ್ಲಿ 124 ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ, ಮೀನುಗಾರಿಕೆ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೇಷ್ಮೆ, ಪಶು ಸಂಗೋಪನೆ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಹಿಂದುಳಿದ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತಿ ಕೋಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ  ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಇಲಾಖೆಯ ಮಾಹಿತಿ ಒದಗಿಸಿದರು.


Spread the love

LEAVE A REPLY

Please enter your comment!
Please enter your name here