ಬೆಳೆ ಹಾನಿಯ ಜಂಟಿ ಸಮೀಕ್ಷೆ ಶೀಘ್ರ ಪೂರ್ಣಗೊಳಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯಾದ್ಯಂತ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

Advertisement

ಸಭೆಯಲ್ಲಿ ಪೂರ್ವ ಮುಂಗಾರು (1-4-25 ರಿಂದ 31-5-25) ಮಳೆಯಿಂದಾದ ಕೃಷಿ, ತೋಟಗಾರಿಕೆ ಬೆಳೆ ಹಾನಿ, ಮನೆ ಹಾನಿ, ಪ್ರವಾಹ, ಸಿಡಿಲಿನಿಂದಾದ ಜೀವಹಾನಿ, ಜಾನುವಾರು ಪ್ರಾಣ ಹಾನಿ, ಪರಿಹಾರ ವಿತರಣೆ, ವಿವಿಧ ಜಲಾಶಯಗಳ ದುರಸ್ತಿ ಇರುವ ಕ್ರಸ್ಟ್ ಗೇಟ್‌ಗಳ ಮಾಹಿತಿ, ರೈತರಿಗೆ ಅವಶ್ಯಕ ಬೀಜ, ರಸಗೊಬ್ಬರ, ಕೀಟನಾಶಕಗಳ ಬೇಡಿಕೆ, ರಸ್ತೆ ಹಾಗೂ ಮೂಲಸೌಕರ್ಯಗಳ ಹಾನಿ ಕುರಿತು ಮಾಹಿತಿ ಪಡೆದರು.

ಇದೇ ಸಂದರ್ಭದಲ್ಲಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಬಗ್ಗೆ ದೃಢೀಕರಿಸಿ, 10 ದಿನಗಳರೊಳಗೆ ಸಮೀಕ್ಷೆ ವರದಿ ಸಲ್ಲಿಸಬೇಕು. ಮನೆಹಾನಿ, ಪ್ರಾಣ ಹಾನಿ, ಜಾನುವಾರು ಹಾನಿ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಲ್ಪಿಸಲು ಸೂಚಿಸಿ, ರೈತರಿಗೆ ಬೀಜ, ರಸಗೊಬ್ಬರ, ಕೀಟನಾಶಕಗಳ ಪೂರೈಕೆ ಬಗ್ಗೆಯೂ ಅವಶ್ಯಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ಹಾನಿ ಕುರಿತು ಮಾಹಿತಿ ನೀಡಿ, ಬೆಳೆ ಹಾನಿಗೆ ಸಂಬಂಧಿಸಿದಂತೆ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ನಡೆಯುತ್ತಿದೆ. ಗದಗ ಜಿಲ್ಲೆಯಲ್ಲಿ 93709 ಸಾವಿರ ಹೆಕ್ಟೇರ್ ಪ್ರದೇಶ ಕೃಷಿ ಹಾಗೂ 7454 ಸಾವಿರ ಹೆಕ್ಟೇರ್ ಪ್ರದೇಶದ ತೋಟಗಾರಿಕೆ ಸೇರಿ ಒಟ್ಟು ಜಿಲ್ಲೆಯಲ್ಲಿ 1.01 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಯಾಗಿದೆ. 183 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಈವರೆಗೆ ಮಾರ್ಗಸೂಚಿಯನ್ವಯ 28.04 ಲಕ್ಷ ರೂ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಶೇ. 33ರಷ್ಟು ಅಧಿಕ ಮಳೆಯಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್, ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಎಸಿ ಗಂಗಪ್ಪ ಎಂ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಹುಲಗಣ್ಣವರ, ತೋಟಗಾರಿಕೆ ಉಪನಿರ್ದೇಶಕ ಶಶಿಕಾಂತ ಕೋಟೆಮನಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲೆಯಲ್ಲಿ ಬೆಳೆದ ಹೆಸರು ಬೆಳೆ ಇನ್ನೇನು ಕೈಗೆ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರೈತರಿಗೆ ಅತಿವೃಷ್ಟಿಯಿಂದಾಗಿ ಹೆಸರು ಬೆಳೆ ಸಂಪೂರ್ಣವಾಗಿ ಹಾನಿಗೀಡಾಗಿದೆ. ಇದರಿಂದ ರೈತರಿಗೆ ಅಪಾರ ಹಾನಿಯಾಗಿದ್ದು, ಶೀಘ್ರವಾಗಿ ಜಂಟಿ ಸಮೀಕ್ಷೆ ಕೈಗೊಂಡು ಪರಿಹಾರ ತಂತ್ರಾಂಶದಲ್ಲಿ ನೋಂದಣಿ ಮಾಡಲು ಈಗಾಗಲೇ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಬೆಳೆ ಹಾನಿಗೀಡಾದ ರೈತರಿಗೆ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲ ತಿಳಿಸಿದರು.

ಜಿಲ್ಲೆಯಲ್ಲಿ 3.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಇತ್ತು. ಶೇ. 108ರಷ್ಟು ಗುರಿ ಸಾಧನೆಯಾಗಿದ್ದು, 1.49 ಲಕ್ಷ ಹೆಕ್ಟೇರ್ ಹೆಸರು ಬೆಳೆ ಹಾಗೂ 93 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಇತರೆ ಬೆಳೆಗಳಿಗೆ ಹಾನಿಯಾಗಿದೆ. ಇದರಿಂದಾಗಿ ಜಿಲ್ಲೆಯ ಒಟ್ಟಾರೆ 94 ಸಾವಿರ ರೈತರು ಹಾನಿ ಅನುಭವಿಸಿದ್ದಾರೆ ಎಂದು ಡಿಸಿ ಸಿ.ಎನ್. ಶ್ರೀಧರ ಮಾಹಿತಿ ಒದಗಿಸಿದರು.


Spread the love

LEAVE A REPLY

Please enter your comment!
Please enter your name here