ವಿಜಯಸಾಕ್ಷಿ ಸುದ್ದಿ, ಧಾರವಾಡ : ಮೇ 7ರಂದು ಧಾರವಾಡ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಅಂದು ಕಾರ್ಮಿಕರಿಗೂ ಸಹ ವೇತನ ಸಹಿತ ರಜೆ ನೀಡಲಾಗಿದೆ. ಎಲ್ಲರೂ ತಪ್ಪದೇ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ. ಹೇಳಿದರು.
ಶುಕ್ರವಾರ ಬೇಲೂರ ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಸಮೂಹದ ಟಾಟಾ ಹಿಟಾಚಿ ಕೈಗಾರಿಕಾ ಪ್ರದೇಶದ ಕೇಂದ್ರದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಪ್ರಯುಕ್ತ ಧಾರವಾಡ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸ್ವೀಪ್ ಚಟುವಟಿಕೆಗಳ ಮುಖಾಂತರ ಮತದಾನದ ಶೇಕಡಾ ಪ್ರಮಾಣ ಹೆಚ್ಚಿಸಲು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಮತ ಚಲಾಯಿಸಬೇಕು. ಯಾವುದೇ ಅರ್ಹ ಮತದಾರರು ಮತದಾನದಿಂದ ವಂಚಿತರಾಗಬಾರದು ಎಂದು ಕರೆ ನೀಡಿದರು.
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತçದ್ ಮಾತನಾಡಿ, ಚುನಾವಣೆಯ ಕುರಿತು ತಾವೆಲ್ಲರೂ ಚುನಾವಣಾ ಆಯೋಗದ ರಾಯಭಾರಿಗಳಾಗಿ ತಮ್ಮ ಮನೆಯಲ್ಲಿ, ಅಕ್ಕಪಕ್ಕದ ಮನೆಯವರಿಗೆ ಹಾಗೂ ಸಂಬಂಧಿಕರು ಕಡ್ಡಾಯವಾಗಿ ಮತದಾನ ಮಾಡಿರುವ ಕುರಿತು ಖಚಿತಪಡಿಸಿಕೊಳ್ಳಬೇಕು ಎಂದರಲ್ಲದೆ, ಕಡಿಮೆ ಮತದಾನವಾಗಿರುವ ಸ್ಥಳಗಳಲ್ಲಿ ಶೇಕಡಾವಾರು ಹೆಚ್ಚಿನ ಮತದಾನ ಆಗಬೇಕೆಂದು ಸೂಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ಕಾಮತ್ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶಿವಪುತ್ರಪ್ಪ, ಟಾಟಾ ಹಿಟಾಚಿಯ ಸುರಕ್ಷತೆ ಹಾಗೂ ಆಡಳಿತ ವಿಭಾಗದ ಮುಖ್ಯಸ್ಥ ಪ್ರಶಾಂತ ದೀಕ್ಷಿತ್, ಕೆ.ಎಮ್. ಶೇಖ್ ಸೇರಿದಂತೆ ಇತರರು ಹಾಜರಿದ್ದರು.