ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮತ್ತು ಯಶಸ್ವಿಯಾಗಿಸಲು ಸಂವಿಧಾನವು ಪ್ರತಿಯೊಬ್ಬ ಪ್ರಜೆಗೆ ಮತದಾನ ಮಾಡುವ ಹಕ್ಕನ್ನು ನೀಡಿದ್ದು, ಎಲ್ಲ ಅರ್ಹ ನಾಗರಿಕರು ಕಡ್ಡಾಯವಾಗಿ ಮತದಾನ ಮಾಡುವುದರಿಂದ ಮಾತ್ರ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು ಎಂದು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಂ.ಎನ್. ಮಲ್ಲೂರ ಹೇಳಿದರು.
ಲಕ್ಷ್ಮೇಶ್ವರ ತಾಲೂಕಿನ ಮಾಢಳ್ಳಿ ಗ್ರಾ.ಪಂ ವ್ಯಾಪ್ತಿಯ ಮಾಢಳ್ಳಿ ಮತ್ತು ಯತ್ನಳ್ಳಿ ಗ್ರಾಮದಲ್ಲಿಯ ಉದ್ಯೋಗ ಖಾತ್ರಿ ಯೋಜನೆಯ `ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ’ ಅಭಿಯಾನದಡಿ ಸಮುದಾಯ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಲ್ಲರನ್ನು ಒಳಗೊಳ್ಳುವ ರಾಷ್ಟç ನಿರ್ಮಾಣ ಮಾಡುವುದು ಸಂವಿಧಾನದ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ವಯಸ್ಕರಿಗೂ ಸಮಾನ ಮತದಾನ ಹಕ್ಕು ಕಲ್ಪಿಸಲಾಗಿದೆ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನ ಜರುಗಲಿದ್ದು, ಕುಟುಂಬದ ಎಲ್ಲ ಸದಸ್ಯರೊಂದಿಗೆ ಭಾಗಿಯಾಗುವಂತೆ ತಿಳಿಸಿದರು.
ಕಡ್ಡಾಯ ಮತದಾನ ಮಾಡುವಂತೆ ಮತದಾರರ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ಕಾರ್ಯದರ್ಶಿ ಎನ್.ಪಿ. ಗಾವಡಿ, ಡಿಇಒ ಪ್ರಕಾಶ ಅಂಗಡಿ, ಗ್ರಾ.ಪಂ ಸಿಬ್ಬಂದಿ, ಕಾಯಕ ಬಂಧುಗಳು, ಕೂಲಿ ಕಾರ್ಮಿಕರು ಹಾಜರಿದ್ದರು.
ಗ್ರಾಮೀಣ ಜನರ ವಲಸೆ ತಪ್ಪಿಸಲು ಬೇಸಿಗೆ ಅವಧಿಯಲ್ಲಿ ಹೆಚ್ಚು ಕೆಲಸ ಒದಗಿಸುವ ಉದ್ದೇಶದಿಂದ ನರೇಗಾ ಯೋಜನೆಯಡಿ ಬದು ನಿರ್ಮಾಣ ಸೇರಿ ಇತರೆ ಸಮುದಾಯ ಕಾಮಗಾರಿ ಆರಂಭಿಸಲಾಗಿದೆ. ಮಹಿಳೆಯರು ಸೇರಿ ಎಲ್ಲ ಅರ್ಹರು ಯೋಜನೆಯಡಿ ಕೆಲಸಕ್ಕೆ ಬರಬೇಕು. ಪುರುಷರು ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತದೆ ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಎಂ.ಎನ್. ಮಲ್ಲೂರ ತಿಳಿಸಿದರು.