ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ 2025ನೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಪರೀಕ್ಷೆಗಳು ಮೇ 26ರಿಂದ ಜೂನ್ 2ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.45 ಗಂಟೆಯವರೆಗೆ ನಡೆಯಲ್ಲಿದ್ದು, ಪರೀಕ್ಷೆಗಳನ್ನು ವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು, ಅವ್ಯವಹಾರಗಳು ನಡೆಯದಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಒಟ್ಟು 20 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಅಲ್ಲಿ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ವಹಿಸಬೇಕೆಂದು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಮಾತನಾಡಿ, ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಗಳು ಮೇ 26ರಿಂದ ಜೂನ್ 2ರವರೆಗೆ ಜಿಲ್ಲೆಯ 20 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದೆ. ಒಟ್ಟು 5532 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳು ಸುಗಮವಾಗಿ ನಡೆಯಲು ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ಸೂಕ್ತ ಪೊಲೀಸ್ ಬಂದೋಬಸ್ತ್, ಮಾರ್ಗಾಧಿಕಾರಿಗಳ ವಾಹನ ವ್ಯವಸ್ಥೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.


Spread the love

LEAVE A REPLY

Please enter your comment!
Please enter your name here