ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸಿ : ವೈಶಾಲಿ ಎಂ.ಎಲ್

0
meeting
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಲೋಕಸಭಾ ಚುನಾವಣೆಯ ಸಿದ್ಧತೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರರ ಜೊತೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಶನಿವಾರ ಸಭೆ ನಡೆಸಿದರು.

Advertisement

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಂಚೆ ಮತಪತ್ರ, ಅಗತ್ಯ ಸೇವೆಗಳಡಿ ಅಂಚೆ ಮತದಾನ, ಮತಗಟ್ಟೆಗೆ ತೆರಳಲು ಆಗದಿರುವ ಹಾಗೂ ಈಗಾಗಲೇ ಒಪ್ಪಿಗೆ ನೀಡಿರುವ 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಂದ ‘ಮನೆ ಮತದಾನ’ ಮಾಡಿಸುವ ಕಾರ್ಯ, ಮತದಾರರ ಮಾಹಿತಿ ಚೀಟಿ ಹಂಚಿಕೆ ಹೀಗೆ ಚುನಾವಣೆ ಸಂಬಂಧ ಹಲವು ವಿಷಯಗಳ ಕುರಿತು ಜಿಲ್ಲಾಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನಡೆಯುವ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಚುನಾವಣೆಯನ್ನು ಅಚ್ಚುಕಟ್ಟಾಗಿ ನಡೆಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಸೂಚಿಸಿದರು.

ಜಿ.ಪಂ ಸಿಇಓ ಎಸ್. ಭರತ್ ಮಾತನಾಡಿ, ಚುನಾವಣಾ ಕರ್ತವ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ಮತದಾನ ಹೆಚ್ಚಳಕ್ಕೆ ಪ್ರೋತ್ಸಾಹಿಸಬೇಕು. ಚುನಾವಣೆಗೆ ನಿಯೋಜಿಸಿರುವ ಅಧಿಕಾರಿಗಳು ತಂಡವಾಗಿ ಕಾರ್ಯ ನಿರ್ವಹಿಸಬೇಕು. ಮಹಿಳೆಯರು ಸೇರಿದಂತೆ ಅರ್ಹರೆಲ್ಲರೂ ಮತದಾನದ ದಿನದಂದು ಮತಗಟ್ಟೆಗೆ ತೆರಳಿ ಮತ ಚಲಾಯಿಸುವಂತಾಗಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಲಹೆ ನೀಡಿದರು.

ಇದೇ ಏಪ್ರಿಲ್ 22ರಂದು ಸಂಜೆ 5 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ ಅವರು ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ತವ್ಯ ನಿರ್ವಹಿಸಬೇಕು. ಸಮಸ್ಯೆಗಳಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ ಅವರು ಚುನಾವಣೆ ಸಂಬಂಧ ಹಲವು ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ತಹಸೀಲ್ದಾರರಾದ ಶ್ರೀನಿವಾಸ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳಿದ್ದರು.

ಮತದಾನದ ಮಹತ್ವ ಕುರಿತು ಇದೇ ಏಪ್ರಿಲ್ 28 ರಂದು ‘ನಮ್ಮ ನಡೆ-ಮತಗಟ್ಟೆ ಕಡೆಗೆ’ ಜಾಗೃತಿ ಅಭಿಯಾನ ನಡೆಯಲಿದ್ದು, ಮತಗಟ್ಟೆವಾರು ಕಾರ್ಯಕ್ರಮಗಳನ್ನು ಆಯೋಜಿಸಿ ಮತದಾನ ಮಹತ್ವ ಕುರಿತು ಅರಿವು ಮೂಡಿಸುವಂತೆ ಇದೇ ಸಂದರ್ಭದಲ್ಲಿ ಜಿ.ಪಂ ಸಿಇಓ ಎಸ್. ಭರತ್ ಸಲಹೆ ನೀಡಿದರು.


Spread the love

LEAVE A REPLY

Please enter your comment!
Please enter your name here