ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಡಿಸೆಂಬರ್ 20ರವರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ವಕ್ಫ್, ಬಾಣಂತಿಯರ ಸಾವು ಮತ್ತಿತರ ವಿಚಾರ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿ ಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದರಂತೆ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ 17 ತಿಂಗಳಲ್ಲಿ 17 ಅವಾಂತರಗಳನ್ನು ತೋರಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು,
ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು 18 ತಿಂಗಳು ಕಳೆದಿವೆ. 17 ತಿಂಗಳಾದರೂ ಸರ್ಕಾರ ಏನೂ ಅಭಿವೃದ್ಧಿ ಮಾಡಿಲ್ಲ. ಆದರೆ 17 ತಿಂಗಳಲ್ಲಿ 17 ಅವಾಂತರಗಳನ್ನು ಸರ್ಕಾರ ತೋರಿಸಿದೆ. ಸಿದ್ದರಾಮಯ್ಯ ಕಳೆದ ಬಾರಿಯ ಆಡಳಿತವನ್ನು ಕೊಡುತ್ತಿಲ್ಲ. ಈ ಬಾರಿ ಸಿದ್ದರಾಮಯ್ಯ ಅವರೇ ಮುಡಾದಲ್ಲಿ ಸಿಲುಕಿ ನರಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇದೀಗ ನಿದ್ದೆರಾಮಯ್ಯ ಆಗಿದ್ದಾರೆ. ಜೊತೆಗೆ ಸರ್ಕಾರವು ಕೂಡ ನಿದ್ದೆಯಲ್ಲಿದೆ. ಸಿಎಂಗೆ ಯಾವುದೇ ಇಲಾಖೆಗಳ ಮೇಲೆಯೂ ಹಿಡಿತ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.