ಕೊಪ್ಪಳ: 2028ರ ವಿಧಾನಸಭಾ ಚುನಾವಣೆಯ ಬಳಿಕವೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ತಂಗಡಗಿ, 2028ರ ಚುನಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿರುವುದಾಗಿ ಕಾಂಗ್ರೆಸ್ನ ಹಿರಿಯ ನಾಯಕರು ಹೇಳುತ್ತಿರುವ ಕುರಿತು ಪ್ರತಿಕ್ರಿಯಿಸಿದರು.
ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಾಗೂ ಭಾವನೆಗಳನ್ನು ವ್ಯಕ್ತಪಡಿಸುವುದರಲ್ಲಿ ತಪ್ಪಿಲ್ಲ. ಆದರೆ 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ತಂಗಡಗಿ ಹೇಳಿದರು.
ಕೊಪ್ಪಳ ಜಿಲ್ಲೆಯ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಸಚಿವ ಸ್ಥಾನಕ್ಕಾಗಿ ಆಕಾಂಕ್ಷೆ ವ್ಯಕ್ತಪಡಿಸಿರುವ ವಿಚಾರಕ್ಕೂ ಸಚಿವ ತಂಗಡಗಿ ಪ್ರತಿಕ್ರಿಯಿಸಿದರು. ಹಿಟ್ನಾಳ್ ಅವರು ಸಚಿವ ಸ್ಥಾನ ಪಡೆಯುವ ಆಕಾಂಕ್ಷೆ ಹೊಂದಿದ್ದರು. ಮುಂದಿನ ದಿನಗಳಲ್ಲಿ ಅವರು ಸಚಿವರಾಗಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ತಂಗಡಗಿ ಹೇಳಿದರು.
ಜಿಲ್ಲೆಯ ಶಾಸಕರ ನಡುವೆ ಯಾವುದೇ ಮುನಿಸಿಲ್ಲ. ಎಲ್ಲ ಶಾಸಕರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದರು. ಬಿಜೆಪಿ ವಿರುದ್ಧವೂ ತೀವ್ರ ವಾಗ್ದಾಳಿ ನಡೆಸಿದ ತಂಗಡಗಿ, ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ಮಾದರಿ ಎಂದು ಹೇಳಿದ ಅವರು, ಆರಂಭದಲ್ಲಿ ಈ ಯೋಜನೆಗಳ ಬಗ್ಗೆ ಟೀಕೆ-ಟಿಪ್ಪಣಿ ಮಾಡಿದ್ದ ಬಿಜೆಪಿಯವರು ಇದೀಗ ಬಿಜೆಪಿ ನೇತೃತ್ವದ ಸರ್ಕಾರಗಳು ಆಡಳಿತದಲ್ಲಿರುವ ರಾಜ್ಯಗಳಲ್ಲಿ ಇದೇ ರೀತಿಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ನಾಯಕರ ನಡುವಿನ ಆಂತರಿಕ ಭಿನ್ನಾಭಿಪ್ರಾಯಗಳನ್ನೂ ಪ್ರಸ್ತಾಪಿಸಿದ ತಂಗಡಗಿ, “ಬಿಜೆಪಿಯಲ್ಲಿ ಅಶೋಕ್ ಅವರನ್ನು ಕಂಡರೆ ಸುನೀಲ್ ಕುಮಾರ್ ಅವರಿಗೆ ಆಗುವುದಿಲ್ಲ, ಸುನೀಲ್ ಕುಮಾರ್ ಅವರನ್ನು ಕಂಡರೆ ಸಿ.ಟಿ. ರವಿ ಅವರಿಗೆ ಆಗುವುದಿಲ್ಲ” ಎಂದು ವ್ಯಂಗ್ಯವಾಡಿದರು.
ಬಿಜೆಪಿಯವರು ಮೊದಲು ತಮ್ಮ ಪಕ್ಷದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ. ನಂತರ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡಲಿ ಎಂದು ಶಿವರಾಜ್ ಎಸ್. ತಂಗಡಗಿ ತಿರುಗೇಟು ನೀಡಿದರು.



