ಶಿವಮೊಗ್ಗ: ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22ರಿಂದ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ.
ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಗಣತಿಯನ್ನು ಜಾತಿ ಗಣತಿಯನ್ನಾಗಿ ಪರಿವರ್ತಿಸಿ ಧರ್ಮ ಒಡೆಯುವ ಕೆಲಸಕ್ಕೆ ಮತ್ತೊಮ್ಮೆ ಕೈಹಾಕಿದೆ. ಜಾತಿ ಜನಗಣತಿಯ ವಿವಾದದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೇಳಿದರು.
ಈ ಹಿಂದೆ ನಡೆಸಿದ ಕಾಂತರಾಜ್ ವರದಿಯನ್ನೇ ಯಥಾವತ್ತಾಗಿ ಜಾರಿಗೆ ತರುತ್ತೇನೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯನವರು ನಂತರ ಹೈಕಮಾಂಡ್ ಒತ್ತಡಕ್ಕೆ ಮಣಿದು ಮತ್ತೆ ಜನಗಣತಿ ಮಾಡುವುದಾಗಿ ಹೇಳಿದ್ದರು. 150 ಕೋಟಿಗೂ ಅಧಿಕ ಹಣವನ್ನು ವ್ಯಯಿಸಿ ಮಾಡಿದ ಗಣತಿಯನ್ನು ಕಸದ ಬುಟ್ಟಿಗೆ ಎಸೆದು ಈಗ ಮತ್ತೆ ಸುಮಾರು 420 ಕೋಟಿ ರು. ವೆಚ್ಚದಲ್ಲಿ ಗಣತಿ ಮಾಡಲು ಹೊರಟಿದ್ದಾರೆ ಎಂದು ಟೀಕಿಸಿದರು.


