ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ವಿರುದ್ಧ ದ್ವೇಷದ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿಯ ಸುವರ್ಣಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು. ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಪ್ಲೇಕಾರ್ಡ್‌ಗಳನ್ನು ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ರಾಜಕೀಯ ಪ್ರೇರಿತವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.



