ವಿಜಯಸಾಕ್ಷಿ ಸುದ್ದಿ, ಗದಗ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಕ್ರಾಂತಿಕಾರಕ ಕಾರ್ಯಕ್ರಮಗಳನ್ನು ಅನುಷ್ಠಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ನಮ್ಮ ನಿರೀಕ್ಷೆ, ಅಪೇಕ್ಷೆಗೂ ಮೀರಿ ಮತಗಳ ಕ್ರೊಢೀಕರಣವಾಗಲಿವೆ ಎಂಬ ಭರವಸೆ ಮೂಡಿದೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ 14ನೇ ವಾರ್ಡಿನ ಟ್ಯಾಗೋರ್ ರಸ್ತೆಯಲ್ಲಿ ರವಿ ಕುಲಕರ್ಣಿ ನಿವಾಸದ ಆವರಣದಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಸಚಿವರು ಮಾತನಾಡಿದರು.
ದಲ್ಲಾಳಿ, ಮಧ್ಯವರ್ತಿಗಳ ಸಹಾಯವಿಲ್ಲದೇ ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. 100ಕ್ಕೆ 99 ಜನರಿಗೆ ಯೋಜನೆಗಳನ್ನು ಮುಟ್ಟಿಸುವ ಮೂಲಕ ಬಡವರ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವ ಕೆಲಸವಾಗುತ್ತಿದೆ. ಪ್ರತಿಯೊಂದು ಮನೆಗಳಲ್ಲಿ ಕಾಂಗ್ರೆಸ್ ಕಾರ್ಯಕ್ರಮ ತಲುಪಿರುವುದು ಜಾಗತಿಕ ದಾಖಲೆಯಾಗಲಿದೆ ಎಂದರು.
ಸುಶಿಕ್ಷಿತರು, ದೇಶದ ಬಗ್ಗೆ ಮಾತನಾಡುವವರು, ಪ್ರಜಾಪ್ರಭುತ್ವ ಉಳಿಸಬೇಕು ಎನ್ನುವವರು ಸೇರಿ ವಾರ್ಡಿನ ಪ್ರತಿಯೊಬ್ಬರೂ ಕಟಿಬದ್ಧರಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ, ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಶಕ್ತಿ ನೀಡಿ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಡಿ.ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿ.ಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ವೈದ್ಯರಾದ ಡಾ. ಪ್ಯಾರಲಿ ನೂರಾಣಿ, ನಗರಸಭೆ ಮಾಜಿ ಅಧ್ಯಕ್ಷ ಪೀರಸಾಬ್ ಕೌತಾಳ, ನಗರಸಭೆ ಮಾಜಿ ಸದಸ್ಯ ಶ್ರೀನಿವಾಸ ಹುಯಿಲಗೋಳ, ಮುಖಂಡರಾದ ಪ್ರಭು ಬುರಬುರೆ, ರವಿ ಕುಲಕರ್ಣಿ ಸೇರಿದಂತೆ ಹಲವಾರು ಮುಖಂಡರು ಇದ್ದರು.