ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜು.12ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ `ಯುವಧ್ವನಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ತಿಂಗಳ ಹಿಂದೆ ಯುವ ಕಾಂಗ್ರೆಸ್ನ ಆಂತರಿಕ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಜಿಲ್ಲಾ ಮಟ್ಟದ, ತಾಲೂಕು ಮಟ್ಟದ, ಬ್ಲಾಕ್ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಲಿದೆ ಎಂದರು.
ಮಾರ್ಗದರ್ಶಕರಾಗಿ ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ, ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ ಗೌಡ, ವಿಭಾಗೀಯ ಅಧ್ಯಕ್ಷರಾದ ದೀಪಿಕಾ ಗೌಡ ಭಾಗವಹಿಸುವರು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷಯ ಪಾಟೀಲ, ಮುಖಂಡರಾದ ಅನ್ವರ ನದಾಫ್, ಮಲ್ಲಪ್ಪ ದಂಡಿನ, ಸಂಗಮೇಶ ಕೆರಕಲಮಟ್ಟಿ, ರಾಘವೇಂದ್ರ ದೊಡ್ಡಮನಿ ಇದ್ದರು.