ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಜಾಹೀರಾತಿನಲ್ಲಿ ಎಲ್ಲ ಸುಳ್ಳು ಮಾಹಿತಿಯನ್ನು ನೀಡುವ ಕೆಲಸವನ್ನು ಮಾಡಿದೆ. ಇದೇ ಜಾಹೀರಾತನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ನೀಡಿದರೆ ನಮ್ಮ ವಿರೋಧ ಇರಲಿಲ್ಲ.
ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಈ ಕಾಂಗ್ರೆಸ್ ಸರಕಾರಕ್ಕೆ ಮಾನ ಮರ್ಯಾದೆ ಇಲ್ಲ. ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ವಿರುದ್ಧ ಪತ್ರಿಕೆಗಳ ಮುಖಪುಟದಲ್ಲಿ ರಾಜ್ಯ ಸರಕಾರ ಜಾಹೀರಾತು ನೀಡಿದ್ದನ್ನು ನಾವು ವಿರೋಧಿಸುತ್ತೇವೆ ಎಂದು ತಿಳಿಸಿದರು.
ಈ ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಗೌರವ ಇಲ್ಲ. ಇವತ್ತು ಕೊಟ್ಟಿರುವ ಜಾಹೀರಾತಿನ ಮೂಲಕ ಅಕ್ಷರಶಃ ಸಂಪೂರ್ಣ ತಪ್ಪು ಮಾಹಿತಿಯನ್ನು ರಾಜ್ಯದ ಜನತೆಗೆ ಕೊಡುವ ಕೆಲಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಿದೆ. ಈ ಜಾಹೀರಾತಿನ ಮುಖೇನ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದೆ ಎಂದು ಖಂಡಿಸಿದರು.



