ನವದೆಹಲಿ: ನವೆಂಬರ್ 26ರಂದು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಆಹ್ವಾನಿಸಲಾಗಿದೆ ಎಂದು ಕೃಷಿ ಸಚಿವ ನರೇಂದ್ರಸ್ವಾಮಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಸಂವಿಧಾನದ ಆಶಯಗಳನ್ನು ಎತ್ತಿಹಿಡಿದ ಎಲ್ಲ ನಾಯಕರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಆಯೋಜಿಸುವ ಉದ್ದೇಶವಿದೆ. ಸಂವಿಧಾನವು ಎಲ್ಲರೂ ಒಗ್ಗಟ್ಟಿನಿಂದ ಬದುಕಲು ಮಾರ್ಗದರ್ಶನ ನೀಡುವ ಅಮೂಲ್ಯ ಗ್ರಂಥವಾಗಿದೆ ಎಂದು ಹೇಳಿದರು.
ಮತ್ತೊಂದು ಸಂವಿಧಾನ ದಿನಾಚರಣೆ ಬಗ್ಗೆ ಪ್ರತಿಕ್ರಿಯೆ
ಸಂವಿಧಾನ ದಿನಾಚರಣೆಯ ಅಂಗವಾಗಿ ಮತ್ತೊಂದು ಕಾರ್ಯಕ್ರಮ ಆಯೋಜಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು, ಯಾರು ಆಚರಣೆ ಮಾಡುತ್ತಾರೆ ಅಥವಾ ಬಿಡುತ್ತಾರೆ ಎಂಬುದು ಸರ್ಕಾರಕ್ಕೆ ಮುಖ್ಯವಲ್ಲ. ಸರ್ಕಾರದ ಅಧಿಕೃತ ಕಾರ್ಯಕ್ರಮದ ಮೇಲಷ್ಟೇ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಫೋನ್ ಟ್ಯಾಪಿಂಗ್ ಆರೋಪದ ಬಗ್ಗೆ ಮಾಹಿತಿ ಇಲ್ಲ
ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಡಿ.ಕೆ. ಶಿವಕುಮಾರ್ ಅವರ ಫೋನ್ ಟ್ಯಾಪಿಂಗ್ ಆಗುತ್ತಿದೆ ಎಂಬ ಆರೋಪಗಳ ಕುರಿತು ಮಾತನಾಡಿದ ನರೇಂದ್ರಸ್ವಾಮಿ, ಈ ವಿಚಾರ ಅವರ ಅನುಭವಕ್ಕೆ ಬಂದಿರುವುದಾಗಿದೆ. ಆದರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಮಾತನಾಡುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ಅಹಿಂದ ಆಶಯವೇ ಕಾಂಗ್ರೆಸ್ನ ಉದ್ದೇಶ
ಅಹಿಂದ ಸಮಾವೇಶದ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷವೇ ಅಹಿಂದ ಆಶಯಗಳನ್ನು ಹೊಂದಿದೆ. ಹಿಂದುಳಿದ ವರ್ಗಗಳು ಸೇರಿದಂತೆ ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಕಲ್ಪಿಸಿ ಸಮಸಮಾಜ ನಿರ್ಮಿಸುವುದು ಪಕ್ಷದ ಉದ್ದೇಶವಾಗಿದೆ ಎಂದು ಹೇಳಿದರು.
ಮಂಗಳೂರು ಸಂಪುಟ ಸಭೆಯ ವೆಚ್ಚಕ್ಕೆ ಸಚಿವರ ಸಮರ್ಥನೆ
ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯ ವೆಚ್ಚದ ಕುರಿತು ಬಿಜೆಪಿ ವ್ಯಕ್ತಪಡಿಸಿರುವ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರ ಯಾರಿಗೂ ತ್ರಿಶೂಲ ಅಥವಾ ಶಸ್ತ್ರಾಸ್ತ್ರಗಳನ್ನು ಪೂರೈಸಿ ಜನರ ಭಾವನೆಗಳೊಂದಿಗೆ ಆಟವಾಡಿಲ್ಲ ಎಂದು ಹೇಳಿದರು.
ಕರಾವಳಿ ಭಾಗದಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸಚಿವ ಸಂಪುಟ ಸಭೆ ನಡೆಸಲಾಗಿದೆ. ಪ್ರವಾಸೋದ್ಯಮವನ್ನು ಬೆಳೆಸುವುದು ಹಾಗೂ ಕರಾವಳಿಯ ನೈಸರ್ಗಿಕ ಸೌಂದರ್ಯವನ್ನು ಬಳಸಿಕೊಂಡು ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು ಸರ್ಕಾರದ ಆಶಯವಾಗಿದೆ ಎಂದು ನರೇಂದ್ರಸ್ವಾಮಿ ತಿಳಿಸಿದರು.









