ವಿಜಯಸಾಕ್ಷಿ ಸುದ್ದಿ, ಧಾರವಾಡ: ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಲಿಖಿತ ಸಂವಿಧಾನ ನಮ್ಮದು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತಳಹದಿಯ ಮೇಲೆ ನಮ್ಮ ಸಂವಿಧಾನ ರಚನೆಯಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಅವರು ಬುಧವಾರ ಬೆಳಿಗ್ಗೆ ಕರ್ನಾಟಕ ವಿದ್ಯಾವರ್ಧಕ ಸಂಘ ಡಾ. ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯು ಸಂಯುಕ್ತವಾಗಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ಉಳಿಯಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನದ ಆಶಯಗಳನ್ನು ಅರಿತುಕೊಳ್ಳಬೇಕು. ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಹೊಣೆ. ನಮ್ಮ ಸಂವಿಧಾನವು ಕೇವಲ ಕಾನೂನಿನ ಪುಸ್ತಕವಲ್ಲ. ಅದು ನಮ್ಮ ದೇಶದ ಆತ್ಮವಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಜೊತೆಗೆ ಸಂವಿಧಾನ ವಿಧಿಸಿರುವ ಮೂಲಭೂತ ಕರ್ತವ್ಯಗಳನ್ನು ಪಾಲಿಸುವ ಜವಾಬ್ದಾರಿಯು ಎಲ್ಲರ ಮೇಲಿದೆ ಎಂದು ಅವರು ತಿಳಿಸಿದರು.
ಶಾಸಕ ಎನ್.ಎಚ್. ಕೋನರೆಡ್ಡಿ ಮಾತನಾಡಿ, ಡಾ. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದ ನಾಯಕರಲ್ಲ. ಅವರು ಇಡೀ ಮನುಕುಲದ ವಿಮೋಚಕರು. ಅವರ ವೈಚಾರಿಕ ನಿಲುವುಗಳು ಮತ್ತು ಸಮಾನತೆಯ ತತ್ವಗಳನ್ನು ಅಳವಡಿಸಿಕೊಂಡರೆ ಮಾತ್ರ ನಾವು ನಿಜವಾದ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಲು ವಿದ್ಯಾರ್ಥಿಗಳು ಸಂವಿಧಾನವನ್ನು ಓದುವುದು ಮತ್ತು ಅರ್ಥಮಾಡಿಕೊಳ್ಳುವುದು ಅವಶ್ಯಕ ಎಂದು ಹೇಳಿದರು.
ಕೆ.ಯು.ಎಸ್.ಕೆ. ಕಾನೂನು ಮಹಾವಿದ್ಯಾಲಯ ಪ್ರಾಧ್ಯಾಪಕಿ ಹಾಗೂ ಪ್ರಾಂಶುಪಾಲರಾದ ಡಾ. ಮಂಜುಳಾ ಎಸ್.ಆರ್ ಅವರು ಸಂವಿಧಾನ ಆಚರಣೆಯ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿ.ಪಂ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಇದ್ದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭಾ ಸ್ವಾಗತಿಸಿ, ಸಂವಿಧಾನ ಪಿಠಿಕೆ ಬೋಧಿಸಿದರು. ಶಿಕ್ಷಕ ಪ್ರವೀಣ ಮಸಗಿ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ಭಾಗವಹಿಸಿದ್ದರು.



