ತುಮಕೂರು:- ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ ಹಾಗೂ ಈಜುಕೊಳ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರಿನಲ್ಲಿ ಆಯೋಜಿಸಿದ್ದ ಕರ್ನಾಟಕ ಕ್ರೀಡಾಕೂಟ 2025-2026ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು, ಜಿಲ್ಲೆಯಲ್ಲಿ ಹಾಕಿ ಸ್ಟೇಡಿಯಂ ಹಾಗೂ ವಿಶ್ವದರ್ಜೆಯ ಈಜುಕೊಳ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಲಾಗುವುದು. ಕ್ರೀಡಾಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಹಣ ಮೀಸಲಿಡಲಿದೆ. ತುಮಕೂರಿನ ಯುವಜನತೆ ಈ ಸೌಲಭ್ಯಗಳ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳಾಗಿ ಹೊರಹೊಮ್ಮಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರೈಸಿದರು.
ತುಮಕೂರು ಜಿಲ್ಲೆಯಿಂದ ಉತ್ತಮ ಕ್ರೀಡಾಪಟುಗಳು ಹೊರಬಂದು ರಾಷ್ಟ್ರ ಮತ್ತು ವಿಶ್ವ ಮಟ್ಟದಲ್ಲಿ ರಾಜ್ಯದ ಕೀರ್ತಿಯನ್ನು ಹೆಚ್ಚಿಸಲಿ. ಕ್ರೀಡೆಯಿಂದ ಜೀವನದಲ್ಲಿ ಶಿಸ್ತು, ಸಂಯಮ ಮತ್ತು ಸಮಯಪ್ರಜ್ಞೆ ಬೆಳೆಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದ ಸಿಎಂ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಕ್ರೀಡಾಕೂಟಗಳ ರೂವಾರಿಯಾಗಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಅಭಿನಂದನೆ ಸಲ್ಲಿಸಿದರು. ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕಬಡ್ಡಿ ಪಟುವಾಗಿದ್ದೆ; ಫುಟ್‌ಬಾಲ್ ಹಾಗೂ ಕ್ರಿಕೆಟ್ ಮೇಲೂ ಆಸಕ್ತಿ ಇತ್ತು. ಇಂದಿಗೂ ಏಕದಿನ, ಟಿ–20 ಕ್ರಿಕೆಟ್ ಹಾಗೂ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಂದ್ಯಗಳನ್ನು ವೀಕ್ಷಿಸುತ್ತೇನೆ ಎಂದು ಹೇಳಿದರು.
ಕ್ರೀಡೆಯಲ್ಲಿ ಸೋಲು–ಗೆಲುವಿಗಿಂತ ಕ್ರೀಡಾಸ್ಪೂರ್ತಿ ಮುಖ್ಯ ಎಂದು ಒತ್ತಿ ಹೇಳಿದ ಅವರು, ಗುರಿ ಸಾಧಿಸಲು ಕಠಿಣ ಪರಿಶ್ರಮ ಮತ್ತು ಉತ್ತಮ ತರಬೇತಿ ಅಗತ್ಯವೆಂದರು. ಕ್ರೀಡಾಪಟುಗಳ ಪ್ರೋತ್ಸಾಹಕ್ಕಾಗಿ ಸರ್ಕಾರ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಜಾರಿಗೊಳಿಸಿದೆ. ಪೊಲೀಸ್ ಇಲಾಖೆಯಲ್ಲಿ ಪೇದೆ ಹುದ್ದೆಯಿಂದ ಆರಕ್ಷಕ ಉಪಾಧೀಕ್ಷಕರ ಹುದ್ದೆಯವರೆಗೆ ಶೇ.3 ಮೀಸಲಾತಿ ನೀಡಲಾಗುತ್ತಿದೆ. ಒಲಂಪಿಕ್ಸ್, ಪ್ಯಾರಾ ಒಲಂಪಿಕ್ಸ್, ಏಷಿಯನ್ ಗೇಮ್ಸ್, ಕಾಮನ್‌ವೆಲ್ತ್ ಗೇಮ್ಸ್ ಸೇರಿದಂತೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ವಿಜೇತರಾದ ಅಥವಾ ಭಾಗವಹಿಸಿದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ವಿವಿಧ ಇಲಾಖೆಗಳಲ್ಲಿಯೂ ಶೇ.2 ಮೀಸಲಾತಿ ಇದೆ. ಜೊತೆಗೆ ಒಲಂಪಿಕ್ಸ್‌ನಲ್ಲಿ ಪದಕ ವಿಜೇತರಿಗೆ ನಗದು ಬಹುಮಾನ ನೀಡಿ ಕ್ರೀಡಾಪಟುಗಳನ್ನು ಉತ್ತೇಜಿಸಲಾಗುತ್ತಿದೆ ಎಂದು ಸಿಎಂ ತಿಳಿಸಿದರು.



