ಬೆಂಗಳೂರು: ರಾಜ್ಯ ಸರ್ಕಾರದಿಂದ ಬರಬೇಕಿರುವ ಸುಮಾರು ₹38 ಸಾವಿರ ಕೋಟಿ ರೂಪಾಯಿ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಪಟ್ಟು ಹಿಡಿದಿದ್ದಾರೆ.
ಡಿಸೆಂಬರ್ವರೆಗೆ ಬಾಕಿ ಹಣ ಪಾವತಿಸುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿರುವ ಬೆನ್ನಲ್ಲೇ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ನೇತೃತ್ವದ ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ.
ಕಳೆದ ಹಲವು ವರ್ಷಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರೂ ಬಿಲ್ ಪಾವತಿಯಾಗದೆ ಗುತ್ತಿಗೆದಾರರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸುಮಾರು ₹38 ಸಾವಿರ ಕೋಟಿ ರೂಪಾಯಿ ಬಾಕಿ ಹಣ ಬಿಡುಗಡೆ ಮಾಡುವಂತೆ ಸಂಘವು ಸರ್ಕಾರವನ್ನು ಒತ್ತಾಯಿಸುತ್ತಿದೆ. ಈಗಾಗಲೇ ಡಿಸೆಂಬರ್ವರೆಗೆ ಹಣ ಪಾವತಿಸಲು ಗಡುವು ನೀಡಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಾಗಿದೆ.
ಇತ್ತೀಚೆಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್ ಅವರು ಬಾಕಿ ಹಣ ಪಾವತಿಯಾಗದಿರುವ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದ ಸುಮಾರು 1.5 ಲಕ್ಷ ಗುತ್ತಿಗೆದಾರರು ಬಿಲ್ ಪಾವತಿಯಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರಕ್ಕೆ ನಮ್ಮ ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ಒಂದೊಂದು ಬಾಟಲ್ ವಿಷವನ್ನಾದರೂ ಕೊಟ್ಟುಬಿಡಿ, ಕುಡಿದು ಸತ್ತು ಹೋಗುತ್ತೇವೆ ಎಂದು ನೋವು ತೋಡಿಕೊಂಡಿದ್ದರು.
ಇದೇ ವೇಳೆ, ಈ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಡಿ.ಕೆ. ಶಿವಕುಮಾರ್ ಅವರು ಗುತ್ತಿಗೆದಾರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರನ್ನು ಕಡೆಗಣಿಸಲಾಗುತ್ತಿದೆ ಎಂದು ಮಂಜುನಾಥ್ ಆರೋಪಿಸಿದ್ದರು.
ಜೂನ್ ತಿಂಗಳಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ ಬಾಕಿ ಹಣ ಬಿಡುಗಡೆ ಮಾಡುವ ಭರವಸೆ ನೀಡಲಾಗಿತ್ತು. ಆದರೆ ಮೂರು ತಿಂಗಳು ಕಳೆದರೂ ಹಣ ಬಿಡುಗಡೆಯಾಗಿಲ್ಲ. ಇತ್ತೀಚೆಗೆ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದಾಗಲೂ ಸಮರ್ಪಕವಾಗಿ ಸಮಯ ನೀಡದೆ ತಾತ್ಸಾರ ತೋರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.
ಇನ್ನು ಕಾಮಗಾರಿಗಳ ಟೆಂಡರ್ ಮಂಜೂರಾದ ಬಳಿಕ ಶಾಸಕರನ್ನು ಭೇಟಿ ಮಾಡಬೇಕು. ಬಿಲ್ ಪಾವತಿಯಾದ ನಂತರ ಅವರಿಗೂ ಪಾಲು ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಹಾಗೂ ಮಧ್ಯವರ್ತಿಗಳ ಮೂಲಕ ಶೇ.70ರಷ್ಟು ಕಮಿಷನ್ ನೀಡುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿತ್ತು.
ಈ ಆರೋಪಗಳು ರಾಜ್ಯ ರಾಜಕೀಯದಲ್ಲೂ ಚರ್ಚೆಗೆ ಗ್ರಾಸವಾಗಿದ್ದವು. ಇದೀಗ ಬಾಕಿ ಬಿಲ್ ಬಿಡುಗಡೆಗೆ ಗಡುವು ನೀಡಿದ ಬೆನ್ನಲ್ಲೇ ಗುತ್ತಿಗೆದಾರರ ನಿಯೋಗ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಮಹತ್ವ ಪಡೆದುಕೊಂಡಿದೆ.









