ಬೆಂಗಳೂರು:- ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ.
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸ್ವಾಮೀಜಿಯ ಹೇಳಿಕೆಗಳು ಪ್ರಚೋದನಕಾರಿಯಾಗಿದ್ದು, ಕೋಮು ಸೌಹಾರ್ದತೆಗೆ ಧಕ್ಕೆ ತರಬಹುದು ಎಂದು ಸೈಯದ್ ಅಬ್ಬಾಸ್ ಎನ್ನುವವರು ದೂರಿನಲ್ಲಿ ತಿಳಿಸಿದರು.
ನವೆಂಬರ್ 26 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ವತಿಯಿಂದ ವಕ್ಫ್ ಬೋರ್ಡ್ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಿದರೆ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ. ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಸರ್ಕಾರ ಹೋದರೂ ತೊಂದರೆ ಇಲ್ಲ. ವಕ್ಫ್ ಬೋರ್ಡ್ ರದ್ದು ಮಾಡುವ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.
ಮುಸ್ಲಿಂ ಧರ್ಮದವರನ್ನ ಗುರಿಯಾಗಿಸಿಕೊಂಡು ಮಾತನಾಡಿರುವುದು ನಮ್ಮ ಭಾವನೆಗಳಿಗೆ ನೋವು ಉಂಟಾಗುವಂತೆ ಮಾಡಿದೆ. ಚಂದ್ರಶೇಖರ ಸ್ವಾಮೀಜಿ ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈ ಮನಸ್ಸು ಹುಟ್ಟುವಂತೆ ಪ್ರಚೋದನಾಕಾರಿ ಭಾಷಣ ಮಾಡಿರುತ್ತಾರೆ. ಹೀಗಾಗಿ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.