ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನ್ಯಾಯಾಲಯಕ್ಕೆ ಖುದ್ದು ಹಾಜರಾದ ಎಂಎಲ್‌ಸಿ ರವಿಕುಮಾರ್ ಅವರಿಗೆ ಜಾಮೀನು ನೀಡಲಾಗಿದ್ದು, ಮುಂದೆ ಯಾವುದೇ ದ್ವೇಷ ಭಾಷಣ ಅಥವಾ ಅವಹೇಳನಕಾರಿ ಟೀಕೆ ಮಾಡಬಾರದೆಂದು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿದೆ.
1 ಲಕ್ಷ ರೂ. ವೈಯಕ್ತಿಕ ಬಾಂಡ್ ಹಾಗೂ 10 ಸಾವಿರ ರೂ. ಶ್ಯೂರಿಟಿ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಹಿಂದಿನ ವಿಚಾರಣೆ ವೇಳೆ ಗೈರುಹಾಜರಾಗಿದ್ದಕ್ಕೆ 500 ರೂ. ದಂಡ ವಿಧಿಸಲಾಗಿದೆ. ಪ್ರಚೋದನಕಾರಿ ಅಥವಾ ದ್ವೇಷಪೂರಿತ ಹೇಳಿಕೆ ನೀಡದಂತೆ ನ್ಯಾಯಾಲಯ ಷರತ್ತು ವಿಧಿಸಿದೆ.
ಏನಿದು ಪ್ರಕರಣ?
2025ರ ಮೇ 24ರಂದು ಕಲಬುರಗಿಯಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ್ದ ರವಿಕುಮಾರ್, ಜಿಲ್ಲಾಧಿಕಾರಿ ಫೌಝಿಯಾ ತರನ್ನಮ್ ಅವರು ಕಾಂಗ್ರೆಸ್ ಸರ್ಕಾರದ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಅಧಿಕಾರಿಯಾಗಿದ್ದಾರೋ ಗೊತ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಸಂಬಂಧ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ವ್ಯಾಪಕ ವಿರೋಧ ವ್ಯಕ್ತವಾದ ಬಳಿಕ ರವಿಕುಮಾರ್ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿ ಕ್ಷಮೆಯಾಚಿಸಿದ್ದರು.



