ನವದೆಹಲಿ: ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪ್ಪರಂಕುಂಡ್ರಂ ಬೆಟ್ಟದಲ್ಲಿರುವ ವಿವಾದಿತ ‘ದೀಪತೂನ್’ ಕಲ್ಲಿನ ಸ್ತಂಭದ ಮೇಲೆ ಕಾರ್ತಿಕ ದೀಪ ಬೆಳಗಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನು ಪಾಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ನ್ಯಾಯಾಲಯದಲ್ಲಿ ಬೇಷರತ್ ಕ್ಷಮೆಯಾಚಿಸಿದೆ.
ನವೆಂಬರ್ 20ರಂದು ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನದಂತೆ ದೀಪತೂನ್ ಸ್ತಂಭದ ಮೇಲೆ ದೀಪ ಬೆಳಗಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿತ್ತು. ಆದರೆ, ದೀಪ ಬೆಳಗಿಸಲು ಉದ್ದೇಶಿಸಿದ್ದ ತಂಡಕ್ಕೆ ಅರುಳ್ಮಿಗು ಸುಬ್ರಮಣಿಯ ಸ್ವಾಮಿ ದೇವಾಲಯದ ಟ್ರಸ್ಟಿಗಳ ಮಂಡಳಿ ಅನುಮತಿ ನೀಡಲಿಲ್ಲ. ಹೀಗಾಗಿ ಆದೇಶ ಜಾರಿಗೊಳಿಸಲು ಸಾಧ್ಯವಾಗಲಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟನೆ ನೀಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಮಧುರೈ ಜಿಲ್ಲಾಧಿಕಾರಿ ನಿಶಾಂತ್ ಕೃಷ್ಣ ಪರವಾಗಿ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ವಸ್ತುಸ್ಥಿತಿ ವರದಿ ಸಲ್ಲಿಸಿದರು.
ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿಲ್ಲ ಎಂದು ಜಿಲ್ಲಾಧಿಕಾರಿ ವರದಿಯಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ನಿರ್ದೇಶನಗಳನ್ನು ಗೌರವಿಸುವುದಾಗಿ ಹಾಗೂ ಅವುಗಳನ್ನು ಪಾಲಿಸಲು ಪ್ರಾಮಾಣಿಕ ಪ್ರಯತ್ನ ಮಾಡಿರುವುದಾಗಿ ಹೇಳಿದ್ದಾರೆ.
ದೇವಾಲಯದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು ಜಿಲ್ಲಾಡಳಿತ ಸ್ವತಂತ್ರವಾಗಿ ಯಾರನ್ನೂ ನೇಮಿಸಲು ಅಥವಾ ಅನುಮೋದಿಸಲು ಸಾಧ್ಯವಿಲ್ಲ. ದೇವಾಲಯದ ಟ್ರಸ್ಟಿಗಳ ಮಂಡಳಿ ನವೆಂಬರ್ 24ರಂದು ಸಾಂಪ್ರದಾಯಿಕ ಉಚ್ಚಿಪಿಳ್ಳೈಯಾರ್ ಮಂಟಪದಲ್ಲೇ ದೀಪ ಬೆಳಗಿಸಲು ನಿರ್ಧರಿಸಿದ್ದರಿಂದ ಅದೇ ಸ್ಥಳದಲ್ಲಿ ದೀಪೋತ್ಸವ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.
ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಕ್ಷಮೆಯಾಚಿಸಲಾಗಿದ್ದು, ಆದೇಶವನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸುವ ಉದ್ದೇಶ ಇರಲಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಮ್ಮತಿ:
ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ದೀಪತೂನ್ ಸ್ತಂಭದ ಮೇಲೆ ದೀಪ ಬೆಳಗಿಸದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಇದೇ ವೇಳೆ, ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಮುಖ್ಯ ಅರ್ಜಿಯ ಅಂತಿಮ ವಿಚಾರಣೆಯನ್ನು ಮುಂದಿನ ವರ್ಷದ ಜನವರಿ ತಿಂಗಳಿಗೆ ನಿಗದಿಪಡಿಸಿದೆ.
ದೀಪತೂನ್ ಸ್ತಂಭದ ಬದಲಿಗೆ ಸಾಂಪ್ರದಾಯಿಕ ಸ್ಥಳದಲ್ಲಿ ದೀಪ ಬೆಳಗಿಸಿದ ವಿಚಾರ ಮಧುರೈನಲ್ಲಿ ರಾಜಕೀಯ ಸಂಘರ್ಷ ಮತ್ತು ಪ್ರತಿಭಟನೆಗಳಿಗೆ ಕಾರಣವಾಗಿದೆ. ಈ ವಿವಾದದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಪ್ರಕರಣವೊಂದು ವರದಿಯಾಗಿದ್ದು, ಹಿಂದೂ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ತಿರುಪ್ಪರಂಕುಂಡ್ರಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗಿದೆ.







