ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಪ್ರಕಟಿಸಿದೆ. 6 ವಾರಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್‌ಪಿಗೆ ಕೋರ್ಟ್ ಆದೇಶಿಸಿದೆ. ಹಗರಣ ಸಂಬಂಧ ಆರು ವಾರಗಳ ಒಳಗಾಗಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು. ಮಂಗಳವಾರ ಹೈಕೋರ್ಟ್ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.