ಹಾಸನ: ಗೌರಿ-ಗಣೇಶ ಮೂರ್ತಿಗಳ ವಿಸರ್ಜನೆಗೆ ಸಿದ್ಧತೆ ನಡೆಯುತ್ತಿದ್ದ ವೇಳೆ ಕೆರೆಗೆ ಹಾರಿದ ವ್ಯಕ್ತಿಯೊಬ್ಬರು ಕೆಸರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆನಂದ್ (35) ಮೃತಪಟ್ಟ ವ್ಯಕ್ತಿ. ಗ್ರಾಮದಲ್ಲಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ನೂರಾರು ಮಂದಿ ಮೂರ್ತಿಗಳನ್ನು ವಿಸರ್ಜಿಸಲು ಕೆರೆಯತ್ತ ತೆರಳುತ್ತಿದ್ದರು.
ಈ ವೇಳೆ ಮದ್ಯಪಾನ ಮಾಡಿದ್ದ ಆನಂದ್, ಮೂರ್ತಿಗಳ ವಿಸರ್ಜನೆಗೂ ಮುನ್ನವೇ ಕೆರೆಗೆ ಹಾರಿದ್ದಾರೆ ಎನ್ನಲಾಗಿದೆ. ಕೆರೆಯ ಕೆಸರಿನಲ್ಲಿ ಸಿಲುಕಿಕೊಂಡ ಅವರನ್ನು ಜೊತೆಯಲ್ಲಿದ್ದವರು ಶೋಧ ನಡೆಸಿ ಹೊರತೆಗೆದಿದ್ದಾರೆ.
ತಕ್ಷಣವೇ ಆನಂದ್ ಅವರನ್ನು ನುಗ್ಗೇಹಳ್ಳಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚನ್ನರಾಯಪಟ್ಟಣ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ, ಅಷ್ಟರಲ್ಲೇ ಅವರು ಮೃತಪಟ್ಟಿದ್ದಾರೆ.
ಘಟನೆ ನುಗ್ಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.










