HomeGadag Newsಗದಗದಲ್ಲಿ ₹164 ಕೋಟಿ ಬೆಳೆ ಹಾನಿ: 1.52 ಲಕ್ಷ ರೈತರಿಗೆ ಬೆಳೆ ವಿಮೆ

ಗದಗದಲ್ಲಿ ₹164 ಕೋಟಿ ಬೆಳೆ ಹಾನಿ: 1.52 ಲಕ್ಷ ರೈತರಿಗೆ ಬೆಳೆ ವಿಮೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ/ಬೆಂಗಳೂರು: ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಭಾರಿ ಹಾನಿಯಾಗಿದ್ದು, ಪ್ರಾಥಮಿಕ ಅಂದಾಜಿನಂತೆ ₹164 ಕೋಟಿ ಬೆಳೆ ಹಾನಿಯಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಒಟ್ಟು 1,52,349 ರೈತರು ನೋಂದಾಯಿಸಿಕೊಂಡಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗಿನ ಸರ್ಕಾರಿ ನೌಕರರ ಸಂವಾದದಲ್ಲಿ ಮಾಹಿತಿ ನೀಡಿದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದ ಅವರು, ಸಂಪುಟ ದರ್ಜೆ ಸಚಿವ ಬಸವರಾಜ ರಾಯರಡ್ಡಿ ಅವರು ಆ.7ರಿಂದ 9ರವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆ, ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಖುದ್ದಾಗಿ ಅವಲೋಕಿಸಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕೃಷಿ ಬೆಳೆಗಳಿಗೆ 1,39,653 ಹಾಗೂ ತೋಟಗಾರಿಕೆ ಬೆಳೆಗಳಿಗೆ 12,696 ರೈತರು ನೋಂದಾಯಿಸಿಕೊಂಡಿದ್ದು, ಒಟ್ಟು 1,52,349 ರೈತರು ಬೆಳೆ ವಿಮೆ ವ್ಯಾಪ್ತಿಗೆ ಬಂದಿದ್ದಾರೆ. ಮಳೆ ಕೊರತೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಉಂಟಾಗಿರುವ ಹಾನಿಯನ್ನು ವಿವಿಧ ಹಂತಗಳಲ್ಲಿ ಪರಿಶೀಲಿಸಲಾಗುತ್ತಿದ್ದು, ಈವರೆಗೆ ₹164 ಕೋಟಿ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಗದಗ ಜಿಲ್ಲೆಯ ಬರ ಪರಿಸ್ಥಿತಿ, ಬೆಳೆ ಹಾನಿ ಹಾಗೂ ರೈತರ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಬರ ಪರಿಸ್ಥಿತಿಯಲ್ಲಿ ಅಧಿಕಾರಿಗಳು ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಿದರು.

ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಮಂಗಳವಾರ ನಡೆದ ಕರ್ನಾಟಕ ಸರ್ಕಾರದ ನೌಕರರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಸರ್ಕಾರದ ಯಶಸ್ಸಿನಲ್ಲಿ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಪಾತ್ರ ಮಹತ್ವದ್ದಾಗಿದೆ. ಜನಸಾಮಾನ್ಯರ ಸೇವಕರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಕೇಂದ್ರ ಸ್ಥಾನದಲ್ಲೇ ಅಧಿಕಾರಿಗಳು ಇರಲಿ

ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ತಮ್ಮ ನಿಯೋಜಿತ ಕೇಂದ್ರ ಸ್ಥಾನದಲ್ಲೇ ವಾಸವಿದ್ದು, ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗಬೇಕು. ಜನರ ಅರ್ಜಿಗಳು ಹಾಗೂ ಕುಂದುಕೊರತೆಗಳು ಅನಗತ್ಯವಾಗಿ ಜಿಲ್ಲಾ ಅಥವಾ ರಾಜ್ಯ ಮಟ್ಟಕ್ಕೆ ತಲುಪದಂತೆ ಸ್ಥಳೀಯ ಹಂತದಲ್ಲಿಯೇ ಪರಿಹರಿಸಬೇಕು ಎಂದು ಸೂಚಿಸಿದರು.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವುದೇ ಪ್ರಮುಖ ಜವಾಬ್ದಾರಿ. ಕಚೇರಿಗೆ ಬರುವ ಸಾರ್ವಜನಿಕರನ್ನು ಗೌರವದಿಂದ ಕಾಣಬೇಕು. ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆಡಳಿತದಲ್ಲಿ ಪಾರದರ್ಶಕತೆ ತರಬೇಕು. ಭ್ರಷ್ಟಾಚಾರಕ್ಕೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಬರದ ಹಿನ್ನೆಲೆಯಲ್ಲಿ ತುರ್ತು ಕ್ರಮ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ವರ್ಚುವಲ್ ಮೂಲಕ ಮಾತನಾಡಿ, ರಾಜ್ಯದ 240 ತಾಲೂಕುಗಳ ಪೈಕಿ 164 ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದೆ. ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದು, ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆಯೂ ಎದುರಾಗಿದೆ ಎಂದರು.

ಗ್ರಾಮೀಣ ಭಾಗದಿಂದ ಜನರು ಗುಳೆ ಹೋಗುವುದನ್ನು ತಡೆಯಲು ಉದ್ಯೋಗ ಖಾತರಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ವಿಬಿಜಿ ರಾಮ್ ಜಿ ಯೋಜನೆಯಡಿ ಈಗಾಗಲೇ 51 ಸಾವಿರ ಮಾನವ ದಿನಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಸೆಪ್ಟೆಂಬರ್‌ನಲ್ಲಿ ಬರ ಪರಿಸ್ಥಿತಿ ಮತ್ತಷ್ಟು ತೀವ್ರವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ತ್ವರಿತವಾಗಿ ಸ್ಪಂದಿಸಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಲಕ್ಷ್ಮಣ ಸವದಿ, ಸಂತೋಷ್ ಎಸ್. ಲಾಡ್, ಅಜಯ್ ಸಿಂಗ್, ವಿಜಯಾನಂದ ಕಾಶಪ್ಪನವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಗದಗ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಹಾಗೂ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಸಹಾಯಕ ಆಯುಕ್ತ ಗಂಗಪ್ಪ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

ಜನಸೇವೆಯೇ ಜನಾರ್ದನ ಸೇವೆ

ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಎಂಬ ಭೇದವಿಲ್ಲದೆ ರಾಜ್ಯದ ಪ್ರಗತಿಗಾಗಿ ಒಟ್ಟಾಗಿ ಕೆಲಸ ಮಾಡಬೇಕು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾರಂಗಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಪ್ರತಿಯೊಬ್ಬ ಸರ್ಕಾರಿ ನೌಕರರೂ ತಮ್ಮ ಜವಾಬ್ದಾರಿಯನ್ನು ಅರಿತು ನಿಸ್ವಾರ್ಥವಾಗಿ ಜನಸೇವೆ ಮಾಡಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ಸ್ಪಂದಿಸಬೇಕು. ಪ್ರತಿಯೊಬ್ಬ ಸರ್ಕಾರಿ ನೌಕರರೂ ‘ಟೀಮ್ ಕರ್ನಾಟಕ’ವಾಗಿ ಜವಾಬ್ದಾರಿಯಿಂದ ಜನಸೇವೆ ಮಾಡಬೇಕು.

— ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img