ಗದಗ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ತನಿಖೆ ಎದುರಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.
ಲಕ್ಷ್ಮೇಶ್ವರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ನಿರ್ದೇಶನದಂತೆ ಎನ್‌ಡಿಎ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ. ಆದರೂ ನನ್ನ ಹೆಸರನ್ನು ಅನಗತ್ಯವಾಗಿ ಈ ವಿವಾದಕ್ಕೆ ಎಳೆದು ತಳಕು ಹಾಕಲಾಗುತ್ತಿದೆ. ಇದರಿಂದ ನನಗೆ ಹಾಗೂ ನನ್ನ ಕ್ಷೇತ್ರದ ಜನತೆಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
“ನಾನು ಯಾವುದೇ ರೀತಿಯ ತನಿಖೆಗೆ ಸಿದ್ಧನಿದ್ದೇನೆ. ಧರ್ಮಸ್ಥಳ ಮಾತ್ರವಲ್ಲ, ಯಾವುದೇ ದೇವಸ್ಥಾನದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧ. ಅಡ್ಡ ಮತದಾನ ಮಾಡಿರುವುದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಅಲ್ಲ, ರಾಜಕೀಯ ಜೀವನದಿಂದಲೇ ನಿವೃತ್ತಿಯಾಗಲು ಸಿದ್ಧನಿದ್ದೇನೆ” ಎಂದು ಸವಾಲು ಹಾಕಿದರು.
ತಮ್ಮ ವಿರುದ್ಧ ಉದ್ದೇಶಪೂರ್ವಕ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ ಅವರು, “ಕಳೆದ ಒಂದು ವರ್ಷದಿಂದ ನನ್ನ ವಿರುದ್ಧ ಸಂಚು ರೂಪಿಸಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ನಾಯಕರಷ್ಟೇ ಅಲ್ಲ, ನಮ್ಮ ಪಕ್ಷದ ಕೆಲ ಮುಖಂಡರ ಕೈವಾಡವೂ ಇದೆ” ಎಂದು ಗಂಭೀರ ಆರೋಪ ಮಾಡಿದರು.
ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಚರ್ಚೆಗಳು ತೀವ್ರಗೊಂಡಿರುವ ನಡುವೆ ಡಾ. ಲಮಾಣಿ ನೀಡಿರುವ ಈ ಹೇಳಿಕೆ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.



