ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗಿದೆ.

ಹಬ್ಬದ ಖರೀದಿಗಾಗಿ ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದೆ. ಅದರಲ್ಲೂ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರವೇ ಹರಿದುಬಂದಿದ್ದು, ವ್ಯಾಪಾರ-ವಹಿವಾಟು ಜೋರಾಗಿ ನಡೆಯುತ್ತಿದೆ.
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಬೆಂಗಳೂರಿನ ವಿವಿಧ ಭಾಗಗಳಿಂದ ಜನರು ಕೆಆರ್ ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಲಕ್ಷ್ಮಿ ಪೂಜೆ ಮತ್ತು ದೀಪಾವಳಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದಾರೆ.
ಮಧ್ಯರಾತ್ರಿಯಿಂದಲೇ ಮಾರುಕಟ್ಟೆಯಲ್ಲಿ ವ್ಯಾಪಾರ ಆರಂಭವಾಗಿದ್ದು, ಬೆಳಗಾಗುತ್ತಿದ್ದಂತೆ ಜನರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಸಣ್ಣ ಮಾರುಕಟ್ಟೆಗಳಲ್ಲಿ ಎಲ್ಲ ವಸ್ತುಗಳು ಒಂದೇ ಕಡೆ ಸಿಗದ ಕಾರಣ ಹೆಚ್ಚಿನವರು ಕೆಆರ್ ಮಾರುಕಟ್ಟೆಯತ್ತ ಮುಖ ಮಾಡಿದ್ದಾರೆ.
ಇನ್ನು ಜನದಟ್ಟಣೆಯ ಪರಿಣಾಮ ಮಾರುಕಟ್ಟೆ ಸುತ್ತಮುತ್ತಲಿನ ರಸ್ತೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಅವಿನ್ಯೂ ರಸ್ತೆ, ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಮೆಜೆಸ್ಟಿಕ್ ಸಂಪರ್ಕಿಸುವ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ವ್ಯಾಪಾರಕ್ಕೆ ಅನುಕೂಲವಾಗುವಂತೆ ಕೆಲವು ರಸ್ತೆಗಳನ್ನು ಬಂದ್ ಮಾಡಿರುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ.










