ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಇಕ್ಬಾಲ್ ಹುಸೇನ್ ಮನವಿ ಮಾಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ. ದೇವರಾಜ ಅರಸು ಅವರ ಬಳಿಕ ದಲಿತರು ಹಾಗೂ ಶೋಷಿತರ ಪರವಾಗಿ ಸಿದ್ದರಾಮಯ್ಯ ಅವರು ಮಹತ್ವದ ಸೇವೆ ಸಲ್ಲಿಸಿದ್ದಾರೆ. ಆದರೆ ಇದೇ ಅವಧಿಯಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಎರಡೂವರೆ ವರ್ಷಗಳ ಆಡಳಿತ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ನಿಷ್ಠಾವಂತ ಮತ್ತು ಶ್ರಮಪಟ್ಟು ಹೋರಾಟ ಮಾಡಿದ ನಾಯಕರಿಗೆ ಅವಕಾಶ ಸಿಗಬೇಕು ಎಂಬ ಅಭಿಪ್ರಾಯವನ್ನು ಹಲವು ಶಾಸಕರು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
“ಒಬ್ಬ ನಿಷ್ಠಾವಂತ ಪಕ್ಷನಿಷ್ಠ ವ್ಯಕ್ತಿಯಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬ ಆಶಯದಿಂದ ನಾವು ಮಾತನಾಡುತ್ತಿದ್ದೇವೆ. ಅವರ ಹೋರಾಟ ಮತ್ತು ಶ್ರಮಕ್ಕೆ ನ್ಯಾಯ ಸಿಗಬೇಕು” ಎಂದು ಇಕ್ಬಾಲ್ ಹುಸೇನ್ ಹೇಳಿದರು.
ಇದಲ್ಲದೆ, ಸುಮಾರು 80ರಿಂದ 90 ಶಾಸಕರು ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಆಶಯ ಹೊಂದಿದ್ದಾರೆ ಎಂದು ತಿಳಿಸಿದ ಅವರು, ಸರ್ಕಾರ ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವುದಾದರೆ ಅದನ್ನು ಕಾರ್ಯರೂಪದಲ್ಲಿಯೂ ತೋರಿಸಬೇಕು ಎಂದು ಆಗ್ರಹಿಸಿದರು.



