ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

0
Spread the love

ಬೆಂಗಳೂರು: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಂತರ ಸುರೇಶ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

Advertisement

“ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತ (ಬಮೂಲ್)ನಲ್ಲಿ 16 ನಿರ್ದೇಶಕರ ಪೈಕಿ 14 ಜನ ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದಾರೆ. ಬಮೂಲ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನನ್ನನ್ನು ಅಧ್ಯಕ್ಷನನ್ನಾಗಿ, ಮಾಗಡಿ ತಾಲೂಕಿನ ಕುದೂರು ರಾಜಣ್ಣ ಅವರನ್ನು ಉಪಾಧ್ಯಕ್ಷರನ್ನಾಗಿ ಎಲ್ಲಾ ನಿರ್ದೇಶಕರು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ” ಎಂದು ತಿಳಿಸಿದರು.

“ನಮ್ಮ ಪಕ್ಷದ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್. ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣಭೈರೇಗೌಡರು ಸೇರಿದಂತೆ ಬಮೂಲ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ” ಎಂದರು.

“ಈ ಸಂದರ್ಭದಲ್ಲಿ ಎಲ್ಲರಿಗೂ ನಾನು ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಇಂದು ನಡೆದ ಚುನಾವಣೆಯಲ್ಲಿ ಸಹಕಾರ ಸಂಸ್ಥೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ. ಈ ಒಕ್ಕೂಟದ ಹಾಲು ಉತ್ಪಾದಕರು, ರೈತ ಬಾಂಧವರು ನಮ್ಮ ಮೇಲೆ ನಿರೀಕ್ಷೆ ಇಟ್ಟು ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಅವರಿಗೂ ಧನ್ಯವಾದ ತಿಳಿಸುತ್ತೇನೆ. ಹಾಲು ಉತ್ಪಾದಕರು, ನಿರ್ದೇಶಕರು ಬದಲಾವಣೆ ತರುವ ನಿರೀಕ್ಷೆ ಹೊಂದಿದ್ದು, ಎಲ್ಲರ ಸಹಕಾರ ಪಡೆದು ಬೆಂಗಳೂರು ಸಹಕಾರ ಹಾಲು ಒಕ್ಕೂಟ ಹಾಗೂ ರೈತರಿಗೆ ನ್ಯಾಯ ಒದಗಿಸುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ” ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here