ಆನೇಕಲ್: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಸಚಿವ ಡಿ. ಸುಧಾಕರ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ ಹಾಗೂ ಎಕ್ಮೋ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವರ ಆರೋಗ್ಯ ವಿಚಾರಿಸಲು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಭಾನುವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದರು. ಇಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹಸಚಿವ ಪರಮೇಶ್ವರ್, ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ವೈದ್ಯರು ಪಾಸಿಟಿವ್ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಬ್ರೈನ್ ಕಾರ್ಯಾಚರಣೆ ಸಾಮಾನ್ಯ ಸ್ಥಿತಿಗೆ ಬರಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ. ಅವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲದಿದ್ದರೂ ವೈದ್ಯರು ಗಮನವಿಟ್ಟು ಚಿಕಿತ್ಸೆ ನೀಡುತ್ತಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ, ಸಚಿವರ ಆರೋಗ್ಯ ವಿಚಾರವನ್ನು ಸರ್ಕಾರ ಮುಚ್ಚಿಡುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ್, ಈ ವಿಷಯದಲ್ಲಿ ಯಾವುದೇ ಮಾಹಿತಿ ಮುಚ್ಚಿಡಲಾಗುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಕುಮಾರಸ್ವಾಮಿ ಅವರಿಗೆ ತಿಳಿದಿರುವುದನ್ನು ಅವರು ಹೇಳುತ್ತಿದ್ದಾರೆ, ಈ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.



