ಬೆಂಗಳೂರು: ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಹಿರಿಯ ನಟ ಅನಂತ್ ನಾಗ್ ಅವರನ್ನು ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ.
ಅನಂತ್ ನಾಗ್ ಅವರ ನಿವಾಸಕ್ಕೆ ತೆರಳಿದ ಸೋಮಣ್ಣ ಅವರು, ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಹೃತ್ಪೂರ್ವಕ ಶುಭಾಶಯ ತಿಳಿಸಿದ್ದಾರೆ.
ಈ ಭೇಟಿಯ ಕುರಿತು ವಿ. ಸೋಮಣ್ಣ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ ಎಂದು ಅವರು ಹೇಳಿದ್ದಾರೆ.
ಕಳೆದ ಐದು ದಶಕಗಳಿಂದ ಭಾರತೀಯ ಚಿತ್ರರಂಗ, ಅದರಲ್ಲೂ ವಿಶೇಷವಾಗಿ ಕನ್ನಡ ಚಿತ್ರರಂಗಕ್ಕೆ ಅನಂತ್ ನಾಗ್ ಅವರು ಸಲ್ಲಿಸಿರುವ ಸೇವೆಯನ್ನು ಸೋಮಣ್ಣ ಅವರು ಸ್ಮರಿಸಿದ್ದಾರೆ. ತಮ್ಮ ಅಭಿನಯದ ಮೂಲಕ ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಅನಂತ್ ನಾಗ್ ಅವರಿಗೆ ದೇಶದ ಅತ್ಯುನ್ನತ ಸಿನಿಮಾ ಗೌರವ ದೊರೆತಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಡಾ. ರಾಜ್‌ಕುಮಾರ್ ಅವರ ಬಳಿಕ ಮತ್ತೊಬ್ಬ ಕನ್ನಡಿಗರಿಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರೆತಿರುವುದು ಹೆಮ್ಮೆಯ ಸಂಗತಿ ಎಂದು ವಿ. ಸೋಮಣ್ಣ ತಿಳಿಸಿದ್ದಾರೆ.

