ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿಯಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ದರ್ಶನ್ ಗೆ ಕೋರ್ಟ್ ಆರು ವಾರಗಳ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಮಧ್ಯೆ ಇಂದು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿಕೆ ಮಾಡಲಾಗಿದೆ.
ಪ್ರಕರಣದ ನಟ ದರ್ಶನ್, ಪವಿತ್ರಾ ಗೌಡ ಸೇರಿ 6 ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಾಯಿತು. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ವಿಚಾರಣೆಯನ್ನು ಮುಂದೂಡಿದ್ದಾರೆ. ವಾದ, ಪ್ರತಿವಾದದ ಬಳಿಕ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ಮುಂದೂಡಲಾಯ್ತು.
ವಿಚಾರಣೆ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಸನ್ನ ಅವರು ದರ್ಶನ್ಗೆ ಮಧ್ಯಂತರ ಜಾಮೀನಿನ ನೀಡಿದ ವೇಳೆ ಸೂಚಿಸಲಾಗಿದ್ದ ಕೆಲ ನಿಯಮಗಳನ್ನು ಪಾಲಿಸಿಲ್ಲವ ಎಂದು ವಾದ ಮಂಡಿಸಿದರು. ದರ್ಶನ್ ಪರ ವಕೀಲರು ಹೊಸ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.
ಅರ್ಹತೆ ಮೇಲೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ನ್ಯಾಯಮೂರ್ತಿಗಳು ಸೂಚಿಸಿದರು. ಇದೇ ವೇಳೆ ವೈದ್ಯಕೀಯ ವರದಿಯ ಪ್ರತಿ ತಮಗೆ ನೀಡಿಲ್ಲವೆಂದು ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದರು. 6 ವಾರಗಳ ಅವಧಿಗೆ ಷರತ್ತಿನ ಮೇಲೆ ಮಧ್ಯಂತರ ಜಾಮೀನು ನೀಡಲಾಗಿದೆ, ಆದರೆ ಸರ್ಜರಿಯ ದಿನಾಂಕ ತಿಳಿಸಿಲ್ಲವೆಂದು ಎಸ್ಪಿಪಿ ಪ್ರಸನ್ನಕುಮಾರ್ ವಾದ ಮಂಡಿಸಿದರು. ಅದೇ ವೇಳೆಗೆ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ಮತ್ತೊಂದು ವೈದ್ಯಕೀಯ ವರದಿಯನ್ನು ಹೈಕೋರ್ಟ್ಗೆ ಸಲ್ಲಿಕೆ ಮಾಡಿದರು.
ಅದೇ ವೈದ್ಯಕೀಯ ವರದಿಯ ಪ್ರತಿಯನ್ನು ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಗೆ ನೀಡಲಾಯ್ತು. ವರದಿ ಪರಿಶೀಲಿಸಿ ಪ್ರತಿಕ್ರಿಯಿಸಲು ಸೂಚನೆ ನೀಡಿದ ನ್ಯಾಯಮೂರ್ತಿಗಳು ನವೆಂಬರ್ 26ಕ್ಕೆ ಅರ್ಜಿ ವಿಚಾರಣೆ ಮುಂದೂಡಿದರು.