ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ಅವರು, ಹೊರಗಿನ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ದರ್ಶನ್ ಪರ ವಕೀಲ ಹಷ್ಮತ್ ಪಾಷಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ವಿಶೇಷ ವೈದ್ಯಕೀಯ ಸೌಲಭ್ಯಗಳಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿದ್ದಾರೆ. ಜೈಲಿನಲ್ಲಿ ಈವರೆಗೆ ಕೇವಲ ಮೂರು ಬಾರಿ ಮಾತ್ರ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿದೆ. ಆದರೂ ನೋವು ಕಡಿಮೆಯಾಗಿಲ್ಲ. ಹೀಗಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇದು ಆರೋಗ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವುದರಿಂದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಬೇಕು ಎಂದು ದರ್ಶನ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಆದರೆ, ವಿಶೇಷ ಸರ್ಕಾರಿ ಅಭಿಯೋಜಕ (ಎಸ್ಪಿಪಿ) ಪ್ರಸನ್ನಕುಮಾರ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಬುಧವಾರ ಆಕ್ಷೇಪಣೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಈ ವಿಚಾರವಾಗಿ ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಹಾಗೂ ಎಸ್ಪಿಪಿ ಪ್ರಸನ್ನಕುಮಾರ್ ನಡುವೆ ವಾದ-ಪ್ರತಿವಾದ ನಡೆದಿದೆ. ಜೈಲಿನಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಜೈಲಿನ ಅಧಿಕಾರಿಗಳಿಂದ ವರದಿ ಪಡೆಯುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.
ಅಲ್ಲದೆ, ಹಿರಿಯ ವೈದ್ಯಾಧಿಕಾರಿಗಳು ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಬೇಕು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ. ಉಭಯ ಪಕ್ಷಗಳ ವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಎಸ್ಪಿಪಿ ಆಕ್ಷೇಪಣೆ ಸಲ್ಲಿಸಿದ ಬಳಿಕ ಮುಂದಿನ ವಿಚಾರಣೆ ನಡೆಯಲಿದೆ.







