ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಜಾತಿಗಣತಿಗೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ 15 ದಿನಗಳ ಕಾಲ ಸಮೀಕ್ಷೆ ನಡೆಯಲಿದ್ದು, ಇದರಿಗಾಗಿ ಅಗತ್ಯ ಪೂರ್ವಭಾವಿ ಸಿದ್ಧತೆಗಳನ್ನು ತಕ್ಷಣವೇ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಈ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ, ಸಮೀಕ್ಷೆ ಕ್ರಮಬದ್ಧವಾಗಿ ಹಾಗೂ ಗಡುವಿನೊಳಗಾಗಿ ಪೂರ್ಣಗೊಳ್ಳಬೇಕು ಎಂದು ತಿಳಿಸಿದರು. ಅಕ್ಟೋಬರ್ ಕೊನೆಗೆ ವರದಿ ತಯಾರಾಗಬೇಕು ಎಂದು ಸೂಚನೆ ನೀಡಿದ್ದು, ತರಬೇತಿ ಸೇರಿದಂತೆ ಸಮೀಕ್ಷೆಗೆ ಪೂರ್ವಭಾವಿ ಸಿದ್ಧತೆಗಳನ್ನು ಈಗಲೇ ಆರಂಭಿಸಲು ಸೂಚನೆ ನೀಡಿದ್ದಾರೆ.
ಸಮೀಕ್ಷೆ ಅತ್ಯಂತ ಸಮರ್ಪಕವಾಗಿ ನಡೆಯಬೇಕು. ಸಮೀಕ್ಷೆ ಕುರಿತು ಯಾವುದೇ ದೂರುಗಳಿಗೆ ಆಸ್ಪದವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಮೀಕ್ಷೆಯಿಂದ ಯಾರೂ ಹೊರಗುಳಿಯದಂತೆ ಖಾತ್ರಿಪಡಿಸಬೇಕು ಎಂದು ಸಿಎಂ ಸಭೆಯಲ್ಲಿ ಸೂಚಿಸಿದ್ದಾರೆ.