ದಾವಣಗೆರೆ: ನಗರದ ವಿನಾಯಕ ಬಡಾವಣೆಯ ನಿವಾಸಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 76.48 ಲಕ್ಷ ರೂ. ಹಣ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ದೊರೆಯುತ್ತದೆ ಎಂಬ ಆಸೆ ತೋರಿಸಿ ವಂಚಕರು ಈ ಕೃತ್ಯ ಎಸಗಿದ್ದಾರೆ. ವಂಚಕನು ಫೇಸ್‌ಬುಕ್ ಮೂಲಕ ಪರಿಚಯ ಮಾಡಿಕೊಂಡು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಸಿಗುತ್ತದೆ ಎಂದು ನಂಬಿಸಿದ್ದಾನೆ.
ವಂಚಕನ ಮಾತು ನಂಬಿದ ವ್ಯಕ್ತಿ ಸೆಪ್ಟೆಂಬರ್‌ನಿಂದ ಡಿಸೆಂಬರ್‌ವರೆಗೆ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ನಂತರ ಹಣವನ್ನು ವಾಪಸ್ ಪಡೆಯಲು ಯತ್ನಿಸಿದಾಗ ಯಾವುದೇ ಹಣ ಬಾರದೇ ಇದ್ದುದರಿಂದ ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ.
ಈ ಸಂಬಂಧ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



