ವಿಜಯಸಾಕ್ಷಿ ಸುದ್ದಿ, ಗದಗ: ರೈತರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಿಂದ ತೀವ್ರ ಟೀಕೆಗೆ ಗುರಿಯಾಗಿದ್ದ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಕೊನೆಗೂ ಸಾವಿರಾರು ರೈತರ ಆಕ್ರೋಶದ ಮುಂದೆ, ಜಿಟಿಜಿಟಿ ಮಳೆಯ ನಡುವೆಯೇ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಬಹಿರಂಗವಾಗಿ ಕ್ಷಮೆಯಾಚಿಸಿದರು. ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
2025-26ನೇ ಸಾಲಿನ ಬೆಳೆ ವಿಮೆ ಬಿಡುಗಡೆ ಹಾಗೂ ಮಳೆ ಕೊರತೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದ ರೈತರೊಂದಿಗೆ ಅವರು ಏಕವಚನದಲ್ಲಿ ಮಾತನಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಜಿಲ್ಲೆಯ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೈತರು ಟ್ರ್ಯಾಕ್ಟರ್, ಚಕ್ಕಡಿ ಗಾಡಿ, ಟಂಟಂ ಹಾಗೂ ಎತ್ತಿನ ಬಂಡಿಗಳಲ್ಲಿ ಗದಗಕ್ಕೆ ಆಗಮಿಸಿದರು. ಚನ್ನಮ್ಮ ವೃತ್ತದಿಂದ ಮುಳಗುಂದ ನಾಕಾವರೆಗೆ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಯತ್ತ ಮೆರವಣಿಗೆ ನಡೆಸಿದ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದ ಹಿನ್ನೆಲೆಯಲ್ಲಿ ರೈತರು ಗದಗ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ರಸ್ತೆ ತಡೆ ನಡೆಸಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಸ್ಥಗಿತಗೊಂಡು ವಾಹನಗಳ ಸಾಲು ಮೈಲುಗಟ್ಟಲೆ ನಿಂತಿತು. “ಜಿಲ್ಲಾಧಿಕಾರಿಗಳು ಖುದ್ದಾಗಿ ಬಂದು ಕ್ಷಮೆ ಕೇಳುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ” ಎಂದು ರೈತರು ಪಟ್ಟು ಹಿಡಿದರು.
ಕೊನೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, “ರೈತರೊಂದಿಗೆ ಒರಟಾಗಿ ಮಾತನಾಡಿದ್ದೇನೆ. ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ. ರೈತರ ಬೆಳೆ ವಿಮೆ ಹಾಗೂ ಪರಿಹಾರ ಸೇರಿದಂತೆ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ” ಎಂದು ಬಹಿರಂಗವಾಗಿ ಹೇಳಿದರು.
ಜಿಲ್ಲಾಧಿಕಾರಿಗಳ ಕ್ಷಮೆಯಾಚನೆಯ ಬಳಿಕ ರೈತರು ಪ್ರತಿಭಟನೆ ಹಿಂಪಡೆದು ಧರಣಿಗೆ ತೆರೆ ಎಳೆದರು.
“ರೈತರ ಮನಸ್ಸಿಗೆ ನೋವಾಗುವಂತೆ ಮಾತನಾಡಿದ್ದರೆ ಕ್ಷಮೆ ಕೋರುತ್ತೇನೆ. ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.”
ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ
ಮಳೆಯಲ್ಲೂ ಕರ್ತವ್ಯ ನಿರ್ವಹಿಸಿದ ಎಸ್‌ಪಿ
ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸುರಿಯುತ್ತಿದ್ದ ಮಳೆಯಲ್ಲೇ ಎಸ್‌ಪಿ ಪ್ರತಿಭಟನಾಕಾರರ ನಡುವೆ ನಿಂತು ಪರಿಸ್ಥಿತಿಯನ್ನು ನಿಯಂತ್ರಿಸಿ, ಜಿಲ್ಲಾಧಿಕಾರಿ ಮತ್ತು ರೈತರ ನಡುವಿನ ಮಾತುಕತೆಗೆ ದಾರಿ ಮಾಡಿಕೊಟ್ಟಿದ್ದು ಗಮನ ಸೆಳೆಯಿತು.



