ಕೋಲಾರ: ಬದುಕಿರುವ ವ್ಯಕ್ತಿಗಳ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೋಂದಣಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೋಲಾರ ನಗರಸಭೆಯ ಹಿಂದಿನ ಆರೋಗ್ಯ ನಿರೀಕ್ಷಕ ಮೊಹಮ್ಮದ್ ನವಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕಳೆದ ಎರಡು ವರ್ಷಗಳ ಅವಧಿಯಲ್ಲಿ ನಗರಸಭೆಯಲ್ಲಿ ಜನನ ಮತ್ತು ಮರಣ ಪ್ರಮಾಣಪತ್ರಗಳ ನೋಂದಣಿ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಶಾಸಕ ಕೊತ್ತೂರು ಮಂಜುನಾಥ್ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೌರಾಡಳಿತ ನಿರ್ದೇಶನಾಲಯದ ಶಿಸ್ತು ಪ್ರಾಧಿಕಾರಿ ಪಿ.ಎನ್. ರವೀಂದ್ರ ಅವರು ಮೊಹಮ್ಮದ್ ನವಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬದುಕಿರುವವರ ಹೆಸರಿನಲ್ಲಿ ಮರಣ ಪ್ರಮಾಣಪತ್ರ ನೀಡಿರುವ ಆರೋಪ ಇದೀಗ ಕೋಲಾರ ನಗರಸಭೆಯಲ್ಲಿ ಚರ್ಚೆಗೆ ಕಾರಣವಾಗಿದೆ.









