ನವದೆಹಲಿ: ಆಮ್ ಆದ್ಮಿ ಪಾರ್ಟಿ (ಎಎಪಿ) ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೀವ ಬೆದರಿಕೆ ಬಂದಿರುವುದಾಗಿ ವರದಿಯಾಗಿದೆ. ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ 7 ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ.

ವರದಿಗಳ ಪ್ರಕಾರ, ನವೆಂಬರ್ 6ರಂದು ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯ ಎಂದು ಪರಿಚಯಿಸಿಕೊಂಡಿದ್ದಾನೆ. 7 ಕೋಟಿ ರೂಪಾಯಿ ನೀಡದಿದ್ದರೆ ಅರವಿಂದ್ ಕೇಜ್ರಿವಾಲ್ ಹಾಗೂ ಅವರ ಮಗಳನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ತಿಳಿದುಬಂದಿದೆ.
ಎಎಪಿ ಶಾಸಕ ಜರ್ನೈಲ್ ಸಿಂಗ್ಗೆ ಕರೆ, ವಾಟ್ಸಾಪ್ ಸಂದೇಶ
ಆರೋಪಿಯು ಎಎಪಿ ತಿಲಕ್ ನಗರ ಶಾಸಕ ಜರ್ನೈಲ್ ಸಿಂಗ್ ಅವರಿಗೆ ಕರೆ ಮಾಡುವುದರ ಜೊತೆಗೆ ವಾಟ್ಸಾಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಶಾಸಕ ಜರ್ನೈಲ್ ಸಿಂಗ್ ಅವರು ತಕ್ಷಣ ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿ ತನಿಖೆ ಆರಂಭ
ಶಾಸಕರ ದೂರಿನ ಆಧಾರದ ಮೇಲೆ ಮೊಹಾಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ವಹಿಸಲಾಗಿದೆ. ಬೆದರಿಕೆ ಕರೆ ಮತ್ತು ಸಂದೇಶದ ಮೂಲದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.







