ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸಮೀಪದ ದೊಡ್ಡೂರು ಗ್ರಾಮದಿಂದ ಹೆಸರೂರು ಗ್ರಾಮಕ್ಕೆ ತೆರಳುವ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸುಧಾರಣೆಗಾಗಿ, ಜಿಲ್ಲಾಧಿಕಾರಿಗಳಿಗೆ, ಶಾಸಕರಿಗೆ, ಲೋಕೋಪಯೋಗಿ ಇಲಾಖೆಯವರಿಗೆ ಹಾಗೂ ಗ್ರಾ.ಪಂನವರಿಗೆ ಮನವಿ ಮಾಡಿದ್ದರೂ ಸಹ ಸ್ಪಂದಿಸದಿರುವ ಹಿನ್ನೆಲೆಯಲ್ಲಿ ಸೆಪ್ಟಂಬರ 4ರಂದು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ಮಾಡುವದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ರೈತರು, ಕೂಲಿ ಕಾರ್ಮಿಕರು ಮತ್ತು ಗ್ರಾಮಸ್ಥರ ಪರವಾಗಿ ಹೇಳಿಕೆ ನೀಡಿರುವ ಅಮರಪ್ಪ ಗುಡಗುಂಟಿ, ಕಳೆದ ಹಲವಾರು ವರ್ಷಗಳಿಂದ ರಸ್ತೆ ಸುಧಾರಣೆಗೆ ಬೇಡಿಕೆ ಇಡುತ್ತಿದ್ದರೂ ಸಹ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ರಸ್ತೆ ಸುಧಾರಣೆ ಕುರಿತು ತಹಸೀಲ್ದಾರರಿಗೆ, ಜಿಲ್ಲಾಧಿಕಾರಿಗಳಿಗೆ 2 ವರ್ಷಗಳ ಹಿಂದೆ ನಡೆದ ಜನಸ್ಪಂದನೆ ಕಾರ್ಯಕ್ರಮದಲ್ಲಿ ಮನವಿ ನೀಡಲಾಗಿತ್ತು. ಆದರೆ ಯಾರು ಸಹ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ರೈತರ ಬಗ್ಗೆ ಇಲಾಖೆಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವದನ್ನು ಪ್ರತಿಭಟಿಸಿ ಸೆ.4ರಂದು ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.