ಬೆಂಗಳೂರು: ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ತಮ್ಮ ಕ್ಷೇತ್ರವನ್ನು ಸೇರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಎಕ್ಸ್ ಮೂಲಕ ಪ್ರತಿಕ್ರಿಯಿಸಿರುವ ಆರ್. ಅಶೋಕ್, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ ಎಂದು ಟೀಕಿಸಿದ್ದಾರೆ.
101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ ದಿನವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದೆ. ರಾಜ್ಯದ 175 ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ತಾನೇ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದೇನೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಹಾಗೂ ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯದ ಖಜಾನೆ ಖಾಲಿ ಮಾಡಿದೆ ಎಂದು ಆರೋಪಿಸಿದ ಅವರು, ಬರ ಘೋಷಣೆಯಲ್ಲೂ ಸರ್ಕಾರ ಚೌಕಾಸಿ ಮಾಡುತ್ತಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.
ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ಅವರೇ ತಮ್ಮ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿರುವುದು ಸರ್ಕಾರದ ರೈತ ವಿರೋಧಿ ಧೋರಣೆಗೆ ಸಾಕ್ಷಿ ಎಂದು ಆರ್. ಅಶೋಕ್ ಟೀಕಿಸಿದ್ದಾರೆ.
‘By birth I am an Agriculturist’ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೈತರ ಸಂಕಷ್ಟದ ಅರಿವು ಹಾಗೂ ಕೃಷಿ ಕ್ಷೇತ್ರದ ಬಗ್ಗೆ ಕಾಳಜಿ ಇರಬೇಕು ಎಂದು ಅವರು ಹೇಳಿದ್ದಾರೆ.
ತಕ್ಷಣವೇ ಮುದ್ದೇಬಿಹಾಳ ಸೇರಿದಂತೆ ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆರ್. ಅಶೋಕ್ ಆಗ್ರಹಿಸಿದ್ದಾರೆ. ಅಲ್ಲದೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ₹5,000 ಕೋಟಿ ವಿಕೋಪ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು ಹಾಗೂ ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೆ ಎಕರೆಗೆ ₹50,000 ತುರ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸರ್ಕಾರ ಇನ್ನೂ ವಿಳಂಬ ಮಾಡಿದರೆ ಅನ್ನದಾತರ ಶಾಪ ಮತ್ತು ಕಣ್ಣೀರಿನಲ್ಲಿ ಕಾಂಗ್ರೆಸ್ ಸರ್ಕಾರ ಕೊಚ್ಚಿಹೋಗುವುದು ನಿಶ್ಚಿತ ಎಂದು ಆರ್. ಅಶೋಕ್ ಕಿಡಿಕಾರಿದ್ದಾರೆ.



