ವಿಜಯಸಾಕ್ಷಿ ಸುದ್ದಿ, ಗದಗ: ಮಳೆಯ ಕೊರತೆಯಿಂದ ಗದಗ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಜಿಲ್ಲೆಯನ್ನು 2026-27ನೇ ಸಾಲಿನ ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗದಗ ಜಿಲ್ಲಾ ಘಟಕವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದೆ.
ಜಿಲ್ಲಾಧ್ಯಕ್ಷ ಶಂಕರಗೌಡ ಮ. ಜಯನಗೌಡ್ರ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಸಮರ್ಪಕ ಮಳೆಯಾಗದ ಕಾರಣ ರೈತರು ಬಿತ್ತಿದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಹಾಗೂ ಹೊಟ್ಟು ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿ ಹೋಬಳಿ ಮಟ್ಟದಲ್ಲಿ ಗೋಶಾಲೆ ತೆರೆಯಬೇಕು ಹಾಗೂ ಮೇವಿನ ಬ್ಯಾಂಕ್‌ಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದರು.
ಬರಗಾಲದಿಂದ ರೈತರು ಗುಳೆ ಹೋಗುವಂತಹ ಪರಿಸ್ಥಿತಿ ಎದುರಿಸುತ್ತಿದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ತಕ್ಷಣವೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ ಗ್ರಾಮೀಣ ಜನರಿಗೆ ಉದ್ಯೋಗ ಕಲ್ಪಿಸಬೇಕು ಎಂದು ಆಗ್ರಹಿಸಿದರು.
2025-26ನೇ ಸಾಲಿನಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ ರೈತರಿಗೆ ಇದುವರೆಗೆ ಬೆಳೆವಿಮೆ ಪರಿಹಾರ ದೊರೆತಿಲ್ಲ. ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಹಾಗೂ ಸಂಬಂಧಪಟ್ಟ ಇಲಾಖೆಗಳು ಕೂಡಲೇ ಬಾಕಿ ಇರುವ ಬೆಳೆವಿಮೆ ಮಂಜೂರು ಮಾಡಬೇಕು. ಜೊತೆಗೆ 2026-27ನೇ ಸಾಲಿನ ಬೆಳೆಹಾನಿ ಪರಿಹಾರವನ್ನು ತ್ವರಿತವಾಗಿ ಬಿಡುಗಡೆ ಮಾಡಿ ರೈತರ ಸಾಲಮನ್ನಾ ಘೋಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಜೀವ ಹುಡೇದ, ರವಿ ವಗ್ಗನವರ, ವೀರಯ್ಯಸ್ವಾಮಿ ಹಿರೇಮಠ, ಈರಪ್ಪ ಸಿದ್ನೆಕೊಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
“ಮಳೆ ಇಲ್ಲದೆ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆವಿಮೆ ಹಾಗೂ ಪರಿಹಾರವನ್ನು ಬಿಡುಗಡೆ ಮಾಡಬೇಕು.”
— ಶಂಕರಗೌಡ ಮ. ಜಯನಗೌಡ್ರ, ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ



