ವಿಜಯಸಾಕ್ಷಿ ಸುದ್ದಿ, ಗದಗ: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಗದಗ ಜಿಲ್ಲೆಯನ್ನು ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, 2025ನೇ ಸಾಲಿನ ಬೆಳೆ ವಿಮೆ ಹಣವನ್ನು ಬಿಡುಗಡೆ ಮಾಡಬೇಕು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಬೆಳೆ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿತು.
ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ ನೇತೃತ್ವದಲ್ಲಿ ತಿಮ್ಮಾಪುರ, ಹರ್ಲಾಪುರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಮನವಿಯಲ್ಲಿ, ಮಳೆ ಕೊರತೆಯಿಂದ ಜಿಲ್ಲೆಯಾದ್ಯಂತ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜಲಾಶಯಗಳು, ಕೆರೆಗಳು ಹಾಗೂ ಕೊಳವೆಬಾವಿಗಳು ಬತ್ತಿವೆ. ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದ್ದು, ರಾಜ್ಯ ಸರ್ಕಾರ ತಕ್ಷಣ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಗಿದೆ.
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈರುಳ್ಳಿ, ಮೆಣಸಿನಕಾಯಿ, ಸೂರ್ಯಕಾಂತಿ, ಜೋಳ, ಹೆಸರು, ಕಡಲೆ ಹಾಗೂ ಗೋಧಿ ಬೆಳೆಗಳಿಗೆ ವಿಮೆ ಮಾಡಿಸಿರುವ ರೈತರಿಗೆ ಬೆಳೆ ನಷ್ಟವಾದರೂ ಪರಿಹಾರ ಸಿಕ್ಕಿಲ್ಲ. ಸಂಬಂಧಪಟ್ಟ ವಿಮಾ ಕಂಪನಿಗಳ ಮೇಲೆ ಒತ್ತಡ ಹೇರಿ ಬಾಕಿ ವಿಮಾ ಹಣವನ್ನು ರೈತರ ಖಾತೆಗೆ ತಕ್ಷಣ ಜಮಾ ಮಾಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಅಲ್ಲದೆ ಎಸ್‌ಬಿಐ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲವನ್ನು 2018ರ ಮಾದರಿಯಲ್ಲಿ ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಗಿದೆ.
ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ ಜೋಗಿನ ಮಾತನಾಡಿ, ತಿಮ್ಮಾಪುರ ಭಾಗದಲ್ಲಿ ಹೆಸರು, ಜೋಳ ಹಾಗೂ ಸೂರ್ಯಕಾಂತಿ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ತಕ್ಷಣ ಪರಿಹಾರ ನೀಡದಿದ್ದರೆ ರೈತರು ಬದುಕು ನಡೆಸುವುದು ಕಷ್ಟವಾಗಲಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿ ಸರ್ಕಾರದ ಗಮನಕ್ಕೆ ತಂದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಅಂದಪ್ಪ ಕೂಳೂರು, ಶರಣಪ್ಪ ಜೋಗಿನ, ಹನುಮಂತ ಭೀಮನೂರು, ಶೇಖಪ್ಪ ಘಂಟೆ, ಹನುಮಪ್ಪ ತಳವಾರ, ಶಿವಕುಮಾರ ಯತ್ನಟ್ಟಿ, ಶೇಖಪ್ಪ ಗಾಜಿ, ಕಪತ್ತಪ್ಪ ಸೋಂಪೂರ, ಬಸಪ್ಪ ಬನ್ನಿಮರದ, ಯಲ್ಲಪ್ಪ ಗಂಗರಾತ್ರಿ, ಮಾರುತಿ ಬಿಚಗಲ್ಲ, ಭೀಮಪ್ಪ ಆಲೂರು ಸೇರಿದಂತೆ ನೂರಾರು ರೈತರು ಉಪಸ್ಥಿತರಿದ್ದರು.
“ಮಳೆ ಇಲ್ಲದೆ ಬೆಳೆಗಳು ಸಂಪೂರ್ಣ ಒಣಗಿ ಹೋಗಿವೆ. ರೈತರ ಪರಿಸ್ಥಿತಿ ಅತ್ಯಂತ ಚಿಂತಾಜನಕವಾಗಿದೆ. ಸರ್ಕಾರ ತಕ್ಷಣ ಸ್ಪಂದಿಸಿ ಗದಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ಬೆಳೆ ವಿಮೆ ಹಣ ಬಿಡುಗಡೆ ಹಾಗೂ ಬೆಳೆ ಸಾಲ ಮನ್ನಾ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯವಾಗಲಿದೆ.”
– ಯಲ್ಲಪ್ಪ ಎಚ್. ಬಾಬರಿ, ಜಿಲ್ಲಾ ಅಧ್ಯಕ್ಷ, ಕರ್ನಾಟಕ ರಾಜ್ಯ ರೈತ ಸಂಘ



