ನಟಿ ರುಕ್ಮಿಣಿ ವಸಂತ್ ಅವರ ಹೆಸರಿನಲ್ಲಿ ಎಐ ಹಾಗೂ ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ನಕಲಿ ಬಿಕಿನಿ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಟಿ ರುಕ್ಮಿಣಿ ವಸಂತ್ ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಐಟಿ ಕಾಯ್ದೆ ಹಾಗೂ ಬಿಎನ್‌ಎಸ್ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ತನಿಖೆ ಆರಂಭಿಸಲಾಗಿದೆ.
ದೂರಿನಲ್ಲಿ ಅವರು, ತಮ್ಮ ಫೋಟೋಗಳನ್ನು ಅನಧಿಕೃತವಾಗಿ ಬಳಸಿ ಎಐ ತಂತ್ರಜ್ಞಾನದಿಂದ ಬೇರೆಯವರ ದೇಹಕ್ಕೆ ಮುಖವನ್ನು ಅಳವಡಿಸಿ ನಕಲಿ ವಿಡಿಯೋ ಮತ್ತು ಚಿತ್ರಗಳನ್ನು ಸೃಷ್ಟಿಸಲಾಗಿದೆ ಎಂದು ಆರೋಪಿಸಿದ್ದಾರೆ. ಇದು ತಮ್ಮ ಗೌರವಕ್ಕೆ ಧಕ್ಕೆ ತರುವ ಹಾಗೂ ಮಾನಹಾನಿ ಮಾಡುವ ಕೃತ್ಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕರಣದಲ್ಲಿ ಒಟ್ಟು 29 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ದೂರು ನೀಡಲಾಗಿದ್ದು, ಅದರಲ್ಲಿ 9 ಇನ್‌ಸ್ಟಾಗ್ರಾಂ ಖಾತೆಗಳು, 14 ಎಕ್ಸ್ (X) ಖಾತೆಗಳು ಹಾಗೂ 6 ಫೇಸ್‌ಬುಕ್ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಸೈಬರ್ ಕ್ರೈಮ್ ಪೊಲೀಸರು ಸಂಬಂಧಿತ ಖಾತೆಗಳ ಮೂಲವನ್ನು ಪತ್ತೆಹಚ್ಚಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.



