ರಾಂಚಿ:- ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಜಾಮೀನು ಮಂಜೂರು ಮಾಡಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಬುಧವಾರ) ಬೆಳಿಗ್ಗೆ 10:55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ಇದಕ್ಕೂ ಮುನ್ನ ಜೂ.26ರಂದು ಖುದ್ದು ಹಾಜರಾಗುವಂತೆ ವಿಶೇಷ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಜಾರ್ಖಂಡ್ ಹೈಕೋರ್ಟ್‌ಗೆ ಮೊರೆ ಹೋಗಿದ್ದರು..
ರಾಹುಲ್ ಗಾಂಧಿ ಪರ ವಕೀಲರು, ತಮ್ಮ ಕಕ್ಷಿದಾರರು ನಿಗದಿತ ದಿನದಂದು ಹಾಜರಾಗಲು ಸಾಧ್ಯವಾಗುವುದಿಲ್ಲ. ಬದಲಿಗೆ ಆ.6ರಂದು ಹಾಜರಾಗಲು ಅವಕಾಶ ನೀಡುವಂತೆ ಜೂ.10ರಂದು ಕೇಳಿಕೊಂಡಿದ್ದರು. ಅದರಂತೆ ಇದೀಗ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಏನಿದು ಘಟನೆ:
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿಯವರು 2018ರ ಚುನಾವಣಾ ರ‍್ಯಾಲಿಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆ ಪ್ರತಾಪ್ ಕುಮಾರ್ ಎಂಬ ವ್ಯಕ್ತಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು.