ನವದೆಹಲಿ: ದೆಹಲಿ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದರು.
ದೆಹಲಿಯಲ್ಲಿ ಫೆ.5 ರಂದು ಚುನಾವಣೆ ನಡೆಯಲಿದ್ದರೆ ಫೆ.8 ರಂದು ಮತ ಎಣಿಕೆ ನಡೆಯಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. 70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಚುನಾವಣೆ ನಡೆಯಬೇಕಿದೆ.
ಈಗಾಗಲೇ ದೆಹಲಿ ವಿಧಾನಸಭಾ ಚುನಾವಣೆಗಾಗಿ ಆಮ್ ಆದ್ಮಿ ಪಕ್ಷ ಎಲ್ಲಾ 70 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಜೊತೆಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಫೆಬ್ರವರಿಯಲ್ಲಿ ನಡೆಯಲಿರುವ 70 ಸದಸ್ಯರ ದೆಹಲಿ ವಿಧಾನಸಭೆ ಚುನಾವಣೆಯ ದಿನಾಂಕ ಪ್ರಕಟವಾಗುವ ಮೊದಲೇ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬೃಹತ್ ಪ್ರಚಾರವನ್ನು ನಡೆಸುತ್ತಿದ್ದ ಪ್ರಧಾನಿ ಮೋದಿ ಪ್ರಚಾರದ ಮೂಲಕ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾರೂಢ ಎಎಪಿಯ ಭದ್ರಕೋಟೆ ಎಂದು ಪರಿಗಣಿಸಲಾದ ನಗರಗಳಲ್ಲಿ ನೆಲೆಯೂರಲು ಸಿದ್ಧತೆಯನ್ನು ನಡೆಸಿದೆ.